ಸಮಗ್ರ ನ್ಯೂಸ್: ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಲಿಪ್ ಲಾಕ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಒಟ್ಟು 5 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದು, ವಿಚಾರಣೆ ವೇಳೆ ಮಹತ್ವದ ಮಾಹಿತಿ ಹೊರಬಿದ್ದಿದೆ.
ಬಂಧಿತರೆಲ್ಲರೂ ಅಪ್ರಾಪ್ತ ವಯಸ್ಸಿನವರಾಗಿದ್ದು, ಅವರನ್ನು ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿ ಹೆತ್ತವರಿಗೆ ಒಪ್ಪಿಸಿದೆ. ಅಗತ್ಯಬಿದ್ದಾಗ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಆದೇಶ ನೀಡಿದೆ.
ಬಂಧಿತರಲ್ಲಿ ವೀಡಿಯೋ ಚಿತ್ರೀಕರಣ ಮಾಡಿದವನು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದವನು ಕೂಡ ಸೇರಿದ್ದಾರೆ. ಒಟ್ಟು ಸುಮಾರು 8 ಮಂದಿ ವಿದ್ಯಾರ್ಥಿಗಳು ಈ ಕೃತ್ಯದಲ್ಲಿ ಭಾಗವಹಿಸಿದ್ದು, ಈ ಪೈಕಿ ಓರ್ವ ಈಗಾಗಲೇ ವಿದೇಶಕ್ಕೆ ತೆರಳಿದ್ದಾನೆ ಎಂದು ತಿಳಿದು ಬಂದಿದೆ. ಕೃತ್ಯಕ್ಕೆ ಸಂಬಂಧಿಸಿ ಪೋಕ್ಸೋ ಕಾಯ್ದೆಯಡಿ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಸುಮಾರು 20 ಸೆಕೆಂಡ್‌ಗಳ ವೀಡಿಯೋ ಹೊರತುಪಡಿಸಿ ಬೇರೆ ಯಾವುದೇ ವೀಡಿಯೋಗಳಿಲ್ಲ. ಇತರ ಕೆಲವು ಅಶ್ಲೀಲ ವೀಡಿಯೋಗಳನ್ನು ಕೆಲವು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಆ ವೀಡಿಯೋ ಮತ್ತು ಚುಂಬನ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಒಟ್ಟಾರೆ ಕಿಸ್ಸಿಂಗ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಪೋಷಕರಲ್ಲಿ ಆತಂಕ ಮೂಡಿಸಿದೆ.