ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳಿಂದ ಆತಂಕದ ವಾತಾವರಣ ಸೃಷ್ಟಿಯಾಗಿರುವುದರಿಂದ ಇಂದು ಶಾಂತಿ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಗೆ ಡಿಸಿ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ವಿವಿಧ ಧರ್ಮದ ಹಾಗೂ ಸಮುದಾಯದ ಮುಖಂಡರ ಉಪಸ್ಥಿತಿಯಲ್ಲಿ ಈ ಶಾಂತಿ ಸಭೆ ನಡೆಯಲಿದೆ. ಈ ಸಂದರ್ಭ ಜಿಲ್ಲೆಯ ಶಾಂತಿ – ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲರಿಂದಲೂ ಸಲಹೆ ಸೂಚನೆಗಳನ್ನು ಪಡೆಯಲಾಗುವುದು. ಜಿಲ್ಲಾಡಳಿತದ ಮುಂದಿನ ನಿಯಮ, ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಹಾಗೂ ಕಟ್ಟೆಚ್ಚರ ವಹಿಸುವ ಕುರಿತೂ ಸೂಚನೆ ನೀಡಲಾಗುತ್ತದೆ ಎಂದು ಹೇಳಿದರು.
ಶಾಂತಿ ಸಭೆ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ
144 ಸೆಕ್ಷನ್ ಜಾರಿ ಮಾಡಲಾಗಿರುವುದರಿಂದ ಜನರು ಗುಂಪು ಸೇರುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಉದ್ವಿಗ್ನ ಸ್ಥಿತಿಯಿದ್ದರೂ, ಸದ್ಯದ ಮಟ್ಟಿಗೆ ಪರಿಸ್ಥಿತಿ ಶಾಂತವಾಗಿದೆ. ಸರಣಿ ಹತ್ಯೆ ನಿಲ್ಲಿಸಲು ಪೊಲೀಸ್ ಕಮಿಷನರ್ ಹಾಗೂ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸರ್ವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಕೆಎಸ್ಆರ್ಪಿ ಬೆಟಾಲಿಯನ್ ಜಿಲ್ಲೆಯಲ್ಲಿ ಬೀಡು ಬಿಟ್ಟಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅವರು ತಿಳಿಸಿದರು.