ಬೆಂಗಳೂರು: ರಾಜ್ಯ ಸರ್ಕಾರದಿಂದ 2022-23ನೇ ಸಾಲಿನಲ್ಲಿ ಹೊಸದಾಗಿ 6,601 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡುವುದಕ್ಕಾಗಿ ಅನುಮತಿ ನೀಡಿ ಆದೇಶಿಸಿದೆ.
ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಸೂಚಿಸಿರುವಂತೆ ರಾಜ್ಯದ ಸರ್ಕಾರಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 6601 ಹೊಸ ಕೊಠಡಿಗಳನ್ನು ನಿರ್ಮಾಣ ಮಾಡಲು ಆದೇಶಿಸಲಾಗಿರುತ್ತದೆ ಎಂದಿದ್ದಾರೆ.
ಈ ಆದೇಶದ ಅನ್ವಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ತಲಾ 20 ಕೊಠಡಿಗಳಂತೆ 4,480 ಕೊಠಡಿಗಳನ್ನು ಹಂಚಿಕೆ ಮಾಡಲಾಗಿದ್ದು, ಮುಂದುವರೆದು 88 ವಿಧಾನಸಭಾ ಕ್ಷೇತ್ರಗಳಿಗೆ ತಲಾ 10 ಹೆಚ್ಚುವರಿ ಕೊಠಡಿಗಳಂತೆ ಒಟ್ಟು 880 ಕೊಠಡಿಗಳನ್ನು ಸಂಬಂಧಪಟ್ಟ ಶಾಸಕರುಗಳಿಂದ ಪಡೆದು, ಅನುಷ್ಠಾನಗೊಳಿಸುವಂತೆ ತಿಳಿಸಿದ್ದಾರೆ.