ಸಮಗ್ರ ನ್ಯೂಸ್: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ದ.ಕ ಜಿಲ್ಲೆಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ವಿಚಾರಣೆಗಾಗಿ 6 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಪ್ರಕರಣದ ಆರೋಪಿಗಳಾದ ನೌಫಾಲ್, ಝೈನುಲ್ ಅಬಿದ್, ಮೊಹಮ್ಮದ್ ಸೈಯದ್, ಅಬ್ದುಲ್ ಬಶೀರ್ ಮತ್ತು ರಿಯಾಜ್ ಅವರನ್ನು ಆಗಸ್ಟ್ 23 ರ ವರೆಗೆ ಎನ್‌ಐಎ ವಶಕ್ಕೆ ಒಪ್ಪಿಸಲಾಗಿದೆ.
ಪ್ರವೀಣ್ ನೆಟ್ಟಾರು ಅವರನ್ನು ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಕುರಿತಂತೆ ಕಾನೂನು ಬಾಹಿರ ತಡೆ ಕಾನೂನಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಬೆಳ್ಳಾರೆ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು.
ಹೆಚ್ಚಿನ ತನಿಖೆಗಾಗಿ ರಾಜ್ಯ ಸರಕಾರ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಿತ್ತು. ಈ ಹಿನ್ನೆಲೆಯಲ್ಲಿ ತನಿಖೆಯನ್ನು ಚುರುಕುಗೊಳಿಸಿರುವ ಎನ್‌ಐಎ ಅಧಿಕಾರಿಗಳು ನಿನ್ನೆ ಐವರು ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ.