ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗಷ್ಟೇ ರಾಜ್ಯಕ್ಕೆ ಭೇಟಿ ನೀಡಿದ್ದು, ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಕೂಡ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಸೆ. 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಸರ್ಕಾರದ ಅಧಿಕೃತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪ್ರಧಾನಿ ಅಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.
ಮೋದಿ ಮಂಗಳೂರು ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು, ಪ್ರಧಾನಿ ಭದ್ರತಾ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿ ಪೂರ್ವ ಸಿದ್ಧತೆ ಮತ್ತು ಭದ್ರತೆ ವ್ಯವಸ್ಥೆ ಪರಿಶೀಲನೆ ನಡೆಸಲಿದ್ದಾರೆ.
ಮಂಗಳೂರು ಭೇಟಿಯ ವೇಳೆ ಮೋದಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದು, ರಾಜ್ಯ ಬಿಜೆಪಿ ನಾಯಕರೊಂದಿಗೆ ಪ್ರಮುಖ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.
ಮಂಗಳೂರಿನ ಪರಿಸ್ಥಿತಿ ತಿಳಿಗೊಳಿಸಲು ಯತ್ನ:
ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಬಿಜೆಪಿ ಕಾರ್ಯಕರ್ತರೇ ಖುದ್ದು ಬಿಜೆಪಿ ವಿರುದ್ಧ ತಿರುಗಿ ಬಿದ್ದಿದ್ದರು. ಇದಾದ ಬಳಿಕ ಸಾವರ್ಕರ್ ಫೋಟೋ ಗಲಾಟೆ ಇತ್ಯಾದಿಗಳಿಂದ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಬಿಜೆಪಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮುನಿಸಿಕೊಂಡಿದ್ದಾರೆ. ಹೀಗಾಗಿ ಬಿಜೆಪಿ ಭದ್ರಕೋಟೆ ಉಳಿಸಿಕೊಳ್ಳಲು ಬಿಜೆಪಿ ಶತಪ್ರಯತ್ನ ಮಾಡುತ್ತಿದೆ. ಇದರ ಫಲವಾಗಿಯೇ ಪ್ರಧಾನಿ ಮೋದಿಯವರನ್ನು ಕರೆಸಿ, ಡ್ಯಾಮೇಜ್ ಕಂಟ್ರೋಲ್‌ಗೆ ಯತ್ನಿಸುತ್ತಿದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.