ಸಮಗ್ರ ನ್ಯೂಸ್: ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಿದ್ದು, ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಯಾದಗಿರಿ, ಕೊಪ್ಪಳ, ಗದಗ, ರಾಯಚೂರು, ವಿಜಯಪುರ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸೆ. 29 ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನ ಹಲವು ಕಡೆ ಹಾಗೂ ಕೆಲವು ಜಿಲ್ಲೆಗಳಲ್ಲಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಪ್ರಮುಖ ಸ್ಥಳಗಳಾದ ಮೆಜೆಸ್ಟಿಕ್, ಶಿವಾನಂದ ಸರ್ಕಲ್, ಕಾರ್ಪೊರೇಷನ್, ಕೆ.ಆರ್ ಮಾರುಕಟ್ಟೆಯಲ್ಲಿ ಮಳೆ ಸುರಿದು ಜನ ಜೀವನ ಅಸ್ಥವ್ಯಸ್ಥಗೊಂಡಿದೆ.
ವಿಜಯಪುರ, ಕಲಬುರಗಿ, ಬೀದರ್, ಚಿತ್ರದುರ್ಗ ಭಾಗದಲ್ಲಿಯೂ ಮಳೆಯಾಗಲಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇವತ್ತು ನಿಗಧಿತ ಪ್ರಮಾಣಕ್ಕಿಂತ ಅಧಿಕ ಮಳೆಯಾಗುವ ನಿರೀಕ್ಷೆಗಳಿವೆ. ಈ ಹಿನ್ನೆಲೆ ನದಿ ತೀರಕ್ಕೆ ತೆರಳದಂತೆ ಜನರಿಗೆ ಸೂಚನೆ ನೀಡಲಾಗಿದೆ. ಇತ್ತ ಪಶ್ಚಿಮ ಘಟ್ಟಗಳಲ್ಲಿ ಮಳೆಯಾಗುತ್ತಿದ್ದು, ಕೃಷ್ಣ ನದಿಯ ಒಳಹರಿವು ಪ್ರಮಾಣ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.