ಸಮಗ್ರ ನ್ಯೂಸ್: ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದ.ಕ ಜಿಲ್ಲೆಯ ಪಣಂಬೂರು ಕಡಲ ಕಿನಾರೆ ಸೇರಿದಂತೆ ಬೆಳ್ತಂಗಡಿ, ಸುಳ್ಯ, ಪುತ್ತೂರು ತಾಲೂಕಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಿದ್ದು, ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ತುಂತುರ ಮಳೆಯಾಗಲಿದ್ದು, ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು ಸೇರಿ ಹಲವೆಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಜಿಟಿ ಜಿಟಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಇರಲಿದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.