ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶಕ್ಕೆ, ವಿದ್ಯಾರ್ಥಿಗಳ ಎಸ್ ಎಸ್ ಎಲ್ ಸಿ ಅಂಕಗಳನ್ನೂ ಪರಿಗಣಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿ, ರಾಜ್ಯ ಸರ್ಕಾರ ನಿನ್ನೆ ಆದೇಶ ಹೊರಡಿಸಿತ್ತು. ಇದಕ್ಕೆ ಮಾನದಂಡವಾಗಿ ಪ್ರಥಮ ಪಿಯುಸಿ ಅಂಕ ಆಧರಿಸಿ, ಪಾಸ್ ಮಾಡುವುದಾಗಿ ಶಿಕ್ಷಣ ಸಚಿವರು ತಿಳಿಸಿದ್ದರು. ಅದರ ಬೆನ್ನಲ್ಲೆ ಇಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತೊಂದು ಶುಭ ಸುದ್ದಿ ನೀಡಿಲಾಗಿದ್ದು, ಎಸ್.ಎಸ್.ಎಲ್.ಸಿ ಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ ಮಾಡಲಾಗುತ್ತದೆ ಎಂದು ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಇನ್ನಷ್ಟು ಸಮಗ್ರವಾಗಲು, ಹಾಗೂ ಹೆಚ್ಚು ನ್ಯಾಯಯುತವಾಗಲು ಈ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ಫಲಿತಾಂಶಗಳನ್ನೂ ಅವಲೋಕಿಸಿ, ಸೂಕ್ತ ಮೌಲ್ಯವನ್ನು ಕಲ್ಪಿಸುವ ಮೂಲಕ ಫಲಿತಾಂಶ ಘೋಷಣೆ ಮಾಡಬೇಕೆಂದು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.