ಸಮಗ್ರ ನ್ಯೂಸ್: ಕಡಬದ ರೆಂಜಿಲಾಡಿ ಗ್ರಾಮದ ಮೀನಾಡಿಯ ನೈಲ ಎಂಬಲ್ಲಿ ಕಾಡಾನೆ ದಾಳಿಗೊಳಗಾಗಿ ಮೃತಪಟ್ಟ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕಾಡಾನೆ ದಾಳಿಯಿಂದ ಮೃತಪಟ್ಟ ಇಬ್ಬರ ಮೃತದೇಹವನ್ನು ಡಿಸಿ ಹಾಗೂ ಡಿಎಫ್ಒ ಬರದೆ ತೆಗೆಯಲು ಬಿಡುವುದಿಲ್ಲ ಎಂದು ಸ್ಥಳೀಯರು ಪಟ್ಟು ಹಿಡಿದಿದ್ದರು. ಈ ಹಿನ್ನಲೆ ಘಟನಾ ಸ್ಥಳಕ್ಕೆ ಡಿಎಫ್ಒ ಡಾ.ವೈ.ಕೆ.ದಿನೇಶ್, ಡಿಸಿ ರವಿಕುಮಾರ್ ಭೇಟಿನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದರು. ಆ ಬಳಿಕ ಮೃತ ಯುವತಿಯ ಮನೆಗೆ ತೆರಳಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ರವಿಕುಮಾರ್, ಇಲ್ಲಿನ ಕಾಡಾನೆ ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸುವ ಬಗ್ಗೆ ಪೂರಕ ಕ್ರಮ ಕೈಗೊಳ್ಳಲಾಗುವುದು. ಮೃತಪಟ್ಟ ಇಬ್ಬರ ಕುಟುಂಬಕ್ಕೆ ಇಂದೇ ತಲಾ 15 ಲಕ್ಷ ಪರಿಹಾರ ನೀಡಲಾಗುವುದು ಎಂದ ಅವರು ಕಾಡಾನೆ ಹಾವಳಿ ನಿಯಂತ್ರಣಕ್ಕೆ ವೈಜ್ಞಾನಿಕ ರೀತಿಯಲ್ಲಿ ಆನೆ ಕಂದಕ ತೆಗೆಯಲಾಗುವುದು ಎಂದರು.