ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮೇ 13 ರವರೆಗೆ ಭಾರಿ ಮಳೆಯಾಗಲಿದೆ.
ಚಂಡಮಾರುತ ಪರಿಣಾಮ ಮುಂದಿನ 5 ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಮೇ 11 ಮತ್ತು ಮೇ 12ರಂದು ಬಿರುಸಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ತಮಿಳುನಾಡಿನ ಕರಾವಳಿ ಸಮೀಪದ ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ಮಾರುತಗಳಿದ್ದು, ಮುಂದಿನ 24 ಗಂಟೆಯಲ್ಲಿ ಇದು ತೀವ್ರಗೊಂಡು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಕರ್ನಾಟಕ, ಕೇರಳ, ತಮಿಳುನಾಡು, ಅಂಡ ಮಾನ್ ಮತ್ತು ನಿಕೋಬಾರ್ ದ್ವೀಪ, ಮಾಹೆ, ಕಾರೈಕಲ್ ಹಾಗೂ ಪುದುಚೇರಿಯಲ್ಲಿ ಮೇ 8ರಿಂದ ಮೇ 12ರವರೆಗೆ ಭಾರಿ ಮಳೆ ಸುರಿಯಲಿದೆ.
ಮೇ 8 ರಿಂದ 12 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಉತ್ತರ ಒಳನಾಡಿನ ರಾಯಚೂರು, ಗದಗ, ಬಾಗಲಕೋಟೆ, ಬೀದರ್, ಕಲಬುರ್ಗಿ, ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗುವ ಸಂಭವ ಇದೆ.