ಸಮಗ್ರ ನ್ಯೂಸ್: ಬಹುನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, 2615 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣ ಕ್ಷೇತ್ರದ ತಮ್ಮ ಸ್ವಂತ ಊರು ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಮತದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ನಾನು 60% ಕ್ಕಿಂತ ಹೆಚ್ಚು ಮತಗಳನ್ನು ಪಡೆಯುತ್ತೇನೆ. ಕಾಂಗ್ರೆಸ್ ಸ್ವಂತ ಬಲದ ಮೇಲೆ ಸರ್ಕಾರ ರಚಿಸಲಿದೆ. ನಾನು ನಿವೃತ್ತಿ ಹೊಂದುವುದಿಲ್ಲ ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಇದು ನನ್ನ ಕೊನೆಯ ಚುನಾವಣೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.