ಸಮಗ್ರ ನ್ಯೂಸ್: ಕರ್ನಾಟಕದ ಮುಖ್ಯಮಂತ್ರಿ ಸ್ಥಾನದ ತೀವ್ರ ಪೈಪೋಟಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಬೆಂಬಲವನ್ನು ಪಡೆದ ನಂತರ ಸಿದ್ದರಾಮಯ್ಯ ಅವರು ಡಿ.ಕೆ.
ಶಿವಕುಮಾರ್ ಗಿಂತ ಸಿಎಂ ಸ್ಥಾನಕ್ಕೆ ಹತ್ತಿರವಾಗಿದ್ದಾರೆ. ಆದರೆ, ಮುಖ್ಯಮಂತ್ರಿ ವಿಚಾರದಲ್ಲಿ ಕಾಂಗ್ರೆಸ್ ಉನ್ನತ ನಾಯಕತ್ವ ಇನ್ನೂ ಭಿನ್ನಾಭಿಪ್ರಾಯ ಹೊಂದಿದೆ ಎನ್ನಲಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸುತ್ತಿದ್ದಾರೆ. ಬಹುತೇಕ ಶಾಸಕರು ಸಿದ್ದರಾಮಯ್ಯ ಅವರನ್ನು ಬೆಂಬಲಿಸುತ್ತಿದ್ದಾರೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಸಿಎಂ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಪರವಾಗಿದ್ದಾರೆ. ಕರ್ನಾಟಕದಲ್ಲಿ ಪಕ್ಷದ ವ್ಯವಹಾರಗಳ ಉಸ್ತುವಾರಿ ಹೊತ್ತಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅವರು ತಟಸ್ಥರಾಗಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಇಬ್ಬರಲ್ಲಿ ಯಾರನ್ನಾದರೂ ಆಯ್ಕೆ ಮಾಡುವ ಜವಾಬ್ದಾರಿಯನ್ನು ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆನ ಭೇಟಿಯ ಸಂದರ್ಭದಲ್ಲಿ ಉಭಯ ನಾಯಕರು ತಮಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕಿರುವ ಬಗ್ಗೆ ಕಾರಣಗಳನ್ನು ತಿಳಿಸಿದ್ದಾರೆ. ಪ್ರತ್ಯೇಕವಾಗಿ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದ ಉಭಯ ನಾಯಕರು ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪಿಕೊಂಡಿಲ್ಲ. ಉಭಯ ನಾಯಕರು ತಮ್ಮ ನಿಲುವಿಗೆ ಪಟ್ಟು ಹಿಡಿದಿರುವುದರಿಂದ ಹೊಸ ಮುಖ್ಯಮಂತ್ರಿ ಘೋಷಣೆಗೆ ಕಾಂಗ್ರೆಸ್ ಮತ್ತೊಂದು ಸುತ್ತಿನ ಚರ್ಚೆ ನಡೆಸುವ ಸಾಧ್ಯತೆ ಇದೆ.
ಬುಧವಾರ ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿ ಸಿಎಂ ಆಯ್ಕೆ ಕುರಿತಾಗಿ ಅಂತಿಮ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಈ ಸಭೆಯಲ್ಲಿ ಪಕ್ಷದ ಉನ್ನತ ನಾಯಕರು ಭಾಗವಹಿಸಲಿದ್ದಾರೆ. ಇಲ್ಲವಾದರೆ ಸಿಎಂ ನಿರ್ಧಾರಕ್ಕಾಗಿ ಕಾಯುವ ಸಾಧ್ಯತೆ ಇದೆ ಎನ್ನಲಾಗಿದೆ.