ಸಮಗ್ರ ನ್ಯೂಸ್’: ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ತಿಂಗಳಾಂತ್ಯದಿಂದ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 30 ಹಾಗೂ 31ರಂದು ಹೆಚ್ಚಿನ ಮಳೆಯಾಗಲಿದ್ದು, ಮೇ 31ರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಲಿದೆ.
ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅತಿ ಹೆಚ್ಚು 5 ಸೆಂ.ಮೀ. ಮಳೆಯಾದ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ, ಹಾಸನದ ಕೊಣನೂರು, ವಿಜಯ ನಗರದ ಹೊಸಪೇಟೆಯಲ್ಲಿ ತಲಾ 4 ಸೆಂ.ಮೀ. ಮಳೆಯಾದ ವರದಿಯಾಗಿದೆ.
ದಕ್ಷಿಣ ಕನ್ನಡದ ಸುಬ್ರಹ್ಮಣ್ಯ, ಮಂಡ್ಯದ ಮದ್ದೂರು ಹಾಗೂ ತುಮಕೂರಿನಲ್ಲಿ ತಲಾ 3 ಸೆಂ.ಮೀ. ಮಳೆಯಾದ ವರದಿಯಾಗಿದೆ. ರಾಯಚೂರಿನಲ್ಲಿ ರಾಜ್ಯದ ಅತಿ ಹೆಚ್ಚು 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.