ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಎದ್ದಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಗದಗ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಲ್ಲೂ ಮಳೆಯ ಅಬ್ಬರ ಇರಲಿದೆ.
ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35 ರಿಂದ 45 ಕಿಲೋ ಮೀಟರ್‌ನಿಂದ 55 ಕಿಲೋ ಮೀಟರ್ ವೇಗದಲ್ಲಿ ಬೀಸುವ ವಾತಾವರಣ ಇರುತ್ತದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಪೂರ್ವ-ಮಧ್ಯ ಮತ್ತು ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಬಿಪರ್‌ಜಾಯ್ ಸೈಕ್ಲೋನ್ ಉತ್ತರದ ಕಡೆಗೆ ಚಲಿಸುವ ಸಾಧ್ಯತೆ ಇದೆ. ಮುಂದಿನ ಕೆಲವು ಗಂಟೆಗಳಲ್ಲಿ ತೀವ್ರ ಚಂಡಮಾರುತವಾಗಿ ರೂಪಗೊಳ್ಳುವ ಸಂಭವ ಇದೆ. ಹೀಗಾಗಿ ದೇಶದ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.