ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಇಂದಿನಿಂದ ಜೂ.21 ರವರೆಗೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಜೂನ್ 18ರ ಬಳಿಕ ಮುಂಗಾರು ಪ್ರಬಲವಾಗಲಿದ್ದು ಜೂನ್ 21ರ ವರೆಗೆ ಮಳೆಯಾಗಲಿದೆ, ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಿಗೆ ಮಳೆಯಾರ್ಭಟ ಜೋರಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ತುಮಕೂರು, ಹಾಸನ, ಮಂಡ್ಯ ಹಾಗೂ ಜೂನ್ 19 ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರಿಗೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 24 ಗಂಟೆಯಲ್ಲಿ ಕರಾವಳಿ ಭಾಗದಲ್ಲಿ 55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಈ ಸಮಯದಲ್ಲಿ ಮೀನುಗಾರರು ಮೀನುಗಾರಿಕೆಗೆ ಇಳಿಯಬಾರದು. ಪ್ರವಾಸಿಗರು ಸಮುದ್ರ ತೀರಕ್ಕೆ ತೆರಳಬಾರದು ಎಂದು ಸೂಚನೆ ನೀಡಲಾಗಿದೆ. ಕೆಲವು ಭಾಗದಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 3ರಿಂದ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗಲಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.