ಸಮಗ್ರ ನ್ಯೂಸ್: ಅರಣ್ಯ, ಸಸ್ಯಸಂಕುಲ,ಪ್ರಾಣಿ ಸಂಕುಲ, ಪಕ್ಷಿ ಸಂಕುಲದ ಸಂರಕ್ಷಣೆಯೇ ಅರಣ್ಯ ಇಲಾಖೆಯ ಆದ್ಯ ಕರ್ತವ್ಯವಾಗಿದ್ದು ಅರಣ್ಯ ವ್ಯಾಪ್ತಿಯಲ್ಲಿ ಯಾರೇ ಅಕ್ರಮವಾಗಿ ಮರ ಕಡಿದರೂ, ಅರಣ್ಯ ಭೂಮಿ ಒತ್ತುವರಿ ಮಾಡಿದರೂ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿಂದು ಅರಣ್ಯ ಇಲಾಖೆಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಅರಣ್ಯನಾಶ ಮತ್ತು ವನ್ಯ ಮೃಗಗಳ ಸಾವು, ಮಾನವ-ಮೃಗ ಸಂಘರ್ಷದ ವಿಚಾರ ಬಹಳ ಗಂಭೀರವಾದ್ದು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು, ಕಳೆದ ಒಂದು ತಿಂಗಳಲ್ಲಿ ನೀವು ಅದನ್ನು ನೋಡಿದ್ದೀರಿ ಎಂದು ಖಂಡ್ರೆ ಹೇಳಿದರು.
ಮಾನವ ಮತ್ತು ಕಾಡು ಮೃಗಗಳ ನಡುವಿನ ಸಂಘರ್ಷ ಕೂಡ ದೊಡ್ಡ ಸವಾಲಾಗಿದೆ. ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ವನ್ಯಮೃಗ ದಾಳಿಯಿಂದ 51 ಸಾವು ಸಂಭವಿಸಿದ್ದು, ಇದರಲ್ಲಿ 29 ಸಾವು ಆನೆಗಳಿಂದಲೇ ಆಗಿದೆ ಎಂದು ನನಗೆ ತಿಳಿಸಲಾಗಿದೆ. ರಾಜ್ಯದಲ್ಲಿ ಸುಮಾರು 6 ಸಾವಿರ 30 ಆನೆ ಇದೆ ಎಂದು ಅಂದಾಜು ಮಾಡಲಾಗಿದೆ. ಮನುಷ್ಯರ ಜೀವ ಅಮೂಲ್ಯವಾಗಿದ್ದು, ಅರಣ್ಯ ಇಲಾಖೆ ಜನರಪರ ಕಾಳಜಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.