ಸಮಗ್ರ ನ್ಯೂಸ್: ರಾಜ್ಯದಲ್ಲಿ ನಿನ್ನೆಯಿಂದ (ಜುಲೈ 20) ಮಳೆ ಬಿರುಸುಗೊಂಡಿದ್ದು, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿದಿದೆ. ಮುಂದಿನ 4 ದಿನಗಳ ವರೆಗೆ ಕರ್ನಾಟಕದ ಕೆಲವು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲೂ ನೈರುತ್ಯ ಮುಂಗಾರು ಜೋರಾಗುವ ಸಾಧ್ಯತೆಯಿದ್ದು, ಸಮುದ್ರ ಮಟ್ಟದಲ್ಲಿ ಗಾಳಿಯ ವೇಗ ಹೆಚ್ಚಿರುತ್ತದೆ. ಹೀಗಾಗಿ ಕರಾವಳಿಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ನಿನ್ನೆಯಿಂದ 5 ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಸಣ್ಣ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಭಾಗದಲ್ಲಿ ಮಂಗಳವಾರ ರಾತ್ರಿಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ನಿನ್ನೆಯಿಂದ 5 ದಿನಗಳವರೆಗೆ ಮಲೆನಾಡು ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.