ಸಮಗ್ರ ನ್ಯೂಸ್: ಚಂದ್ರಯಾನ-3 ಯೋಜನೆಯ ಯಶಸ್ಸಿಗೆ ಕಾರಣರಾದ ಇಸ್ರೋ (ISRO) ವಿಜ್ಞಾನಿಗಳಿಗೆ ಅಭಿನಂದಿಸಲು ಬೆಂಗಳೂರಿಗೆ ಬಂದಿದ್ದ ಪ್ರಧಾನಮಂತ್ರಿ ಮೋದಿ, ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗದೆ ದೆಹಲಿಗೆ ಮರಳಿದ್ದಾರೆ. ರಸ್ತೆ ಬದಿಯಲ್ಲೇ ನಿಂತು ಮೋದಿಯನ್ನು ನೋಡಿದ ಬಿಜೆಪಿ ಸಂಸದರು ಮತ್ತು ಶಾಸಕರ ಕಾಲೆಳೆದಿರುವ ಕಾಂಗ್ರೆಸ್, ‘ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ’ ಎಂದು ಲೇವಡಿ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ‘ರಾಜ್ಯ ಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ. ರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ’ ಎಂದು ಕಾಲೆಳೆದಿದೆ.
‘ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡ್ ನಾಯಕರು ಕನಿಷ್ಠ ಪ್ರಾಮುಖ್ಯತೆಯನ್ನೂ ಕೊಡುತ್ತಿಲ್ಲ. ಮೋದಿಯ ಕೋಪ ತಣ್ಣಗಾಗುವವರೆಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆಗುವುದಿಲ್ಲ, ಮೋದಿ ಕೋಪ ತಣ್ಣಗಾಗುವುದೂ ಇಲ್ಲ! ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ನೇಮಕ ಆಗುವುದೂ ಅನುಮಾನ, ಹಾಲಿ ಅಧ್ಯಕ್ಷ ಬೀದಿ ಪಾಲಾಗಿದ್ದಾರೆ! ಕರ್ನಾಟಕ ಬಿಜೆಪಿ ಅಬ್ಬೇಪಾರಿಯಾಗಿದೆ ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ’ ಎಂದು ಬಿಜೆಪಿ ಶಾಸಕರು ಹಾಗೂ ಸಂಸದರು ಬ್ಯಾರಿಕೇಡ್ ಹಿಂಬಾಗ ನಿಂತಿರುವ ಫೋಟೋಗಳನ್ನು ಕಾಂಗ್ರೆಸ್ ಟ್ವೀಟ್ ಮಾಡಿದೆ.