ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಅಂದರೆ ಸೇ.18 ರವರೆಗೆ ಮಳೆಯ ಎಚ್ಚರಿಕೆ ನೀಡಲಾಗಿದೆ.
ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ಯಾದಗಿರಿ, ಬೆಂಗಳೂರು, ಚಾಮರಾಜನಗರ, ದಾವಣಗೆರೆ, ಹಾಸನ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಭಾರತೀಯ ಹವಾಮಾನ ಇಲಾಖೆ (IMD) ದೇಶದ ಹಲವು ರಾಜ್ಯಗಳಲ್ಲಿ ಸೆಪ್ಟೆಂಬರ್ 17 ರವರೆಗೆ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ. ಒಡಿಶಾ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ವಾಯುಭಾರ ಕುಸಿತದ ಪರಿಣಾಮ ಮುಂಗಾರು ಚುರುಕುಕೊಂಡಿದೆ. ಗಾಳಿಯ ದಿಕ್ಕು ಬದಲಾಗಿ ಪಶ್ಚಿಮದಿಂದ ಬೀಸುತ್ತಿದ್ದು, ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಕೂಡ ಯೆಲ್ಲೋ ಅಲರ್ಟ್ ನೀಡಲಾಗಿದೆ.