ಸಮಗ್ರ ನ್ಯೂಸ್: ಕಾವೇರಿ ಜಲ ವಿವಾದ ವಿಚಾರವಾಗಿ ಇಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ತಮಿಳುನಾಡಿಗೆ ಕೆಆರ್ಎಸ್ನಿಂದ 5000 ಕ್ಯೂಸೆಕ್ ನೀರು ಹರಿಸಬೇಕು ಎಂದು ಆದೇಶ ಹೊರಡಿಸಿದೆ. ಹೀಗಾಗಿ ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
CWMA ಆದೇಶ ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿ, ಮುಂದಿನ 15 ದಿನಗಳ ಕಾಲ ಪ್ರತಿದಿನ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸಲು ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ.
ಕರ್ನಾಟಕದಿಂದ ತಮಿಳುನಾಡಿಗೆ 5,000 ಕ್ಯೂಸೆಕ್ಸ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸುವ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ತಲಾ 5 ಸಾವಿರ ಕ್ಯೂಸೆಕ್ಸ್ ನೀರು ಹರಿಸಬೇಕು ಎಂದು ತಿಳಿಸಿದೆ.
ಕನ್ನಡ ನಾಡಿನಲ್ಲಿ ತೀವ್ರ ಮಳೆ ಅಭಾವದ ಹಿನ್ನೆಲೆಯಲ್ಲಿಯೂ ತಮಿಳುನಾಡು ನಮಗೆ ಸಾಮಾನ್ಯ ವರ್ಷಗಳಂತೆ ನೀರು ಹರಿಸುವಂತೆ ಪಟ್ಟು ಹಿಡಿದಿದ್ದು, ಕರ್ನಾಟಕ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಈ ಬಗ್ಗೆ ಕರ್ನಾಟಕ ಹಾಗೂ ತಮಿಳುನಾಡು ಪರ ವಕೀಲರು ಪರಸ್ಪರ ವಾದ ಮಂಡಿಸಿದ್ದಾರೆ. ಇಲ್ಲಿದೆ ನೋಡಿ ಪರಸ್ಪರ ವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 5000 ಕ್ಯೂಸೆಕ್ಸ್ ನೀಡು ಬಿಡುವಂತೆ ಆದೇಶ ಹೊರಡಿಸಿದೆ.
ಇದಾದ ನಂತರ ನೀರಿನ ಲಭ್ಯತೆಯ ವಾಸ್ತವಾಂಶವನ್ನು ನೋಡಿಕೊಂಡು ಮುಂದಿನ ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳಿಗೊಮ್ಮೆ ಸಭೆಯನ್ನು ಮಾಡಬೇಕು. ಎರಡೂ ರಾಜ್ಯಗಳು ಪ್ರಾಧಿಕಾರದ ಆದೇಶವನ್ನು ಪಾಲಿಸಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಗವಾಯ್ ಆದೇಶ ಹೊರಡಿಸಿದ್ದಾರೆ.
ಕಾವೇರಿ ನಿಯಂತ್ರಣ ಆಯೋಗ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶಗಳು ಮತ್ತು ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಲಾಗುವುದಿಲ್ಲ. ಎರಡು ಸಮಿತಿಗಳ ಆದೇಶವನ್ನು ಒಪ್ಪಬೇಕಾಗುತ್ತದೆ. ಎರಡು ಸಮಿತಿಗಳ ಆದೇಶವನ್ನು ಕರ್ನಾಟಕ ಪಾಲಿಸಬೇಕು, ಹೀಗಾಗಿ ಕರ್ನಾಟಕ ನೀರು ಹರಿಸಲೇಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.
ಪ್ರಾಧಿಕಾರದ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣಾ ಸಮಿತಿ ಎರಡರಲ್ಲೂ ಜಲ, ಕೃಷಿ ತಜ್ಞರು ಇದ್ದಾರೆ. ಬರ, ಮಳೆ ಕೊರತೆ ಆಧರಿಸಿ ತೀರ್ಮಾನ ಕೈಗೊಂಡಿದ್ದರು. ಅಲ್ಲದೆ ಮತ್ತಿತರ ವಿಚಾರಗಳನ್ನು ಪರಿಗಣಿಸಿ 5000 ಕ್ಯೂಸೆಕ್ಸ್ ನೀರು ಬಿಡುಗಡೆ ತೀರ್ಮಾನ ಮಾಡಿದ್ದರು. ಸರಾಸರಿ ಒಳಹರಿವು ಕಡಿಮೆ ಆಗಿದೆ. ಸಂಕಷ್ಟ ಪರಿಸ್ಥಿತಿ ಈಗಲೂ ಇದೆ. ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಕೊರತೆ ಇದೆ. ಇದನ್ನೆಲ್ಲ ಕಾವೇರಿ ಸಮಿತಿ ಮತ್ತು ಪ್ರಾಧಿಕಾರ ಆದ್ಯತೆಗೆ ತೆಗೆದುಕೊಂಡಿದೆ. ಹಾಗಾಗಿ ಎರಡು ಸಮಿತಿ ಮತ್ತು ಪ್ರಾಧಿಕಾರಗಳ ಅದೇಶಗಳನ್ನ ತಡೆಹಿಡಿಯಲು ಸಾಧ್ಯ ಇಲ್ಲ ಎಂದು ಸುಪ್ರೀಂಕೋರ್ಟ್ ಸಮಿತಿ, ಪ್ರಾಧಿಕಾರದ ಅದೇಶಗಳನ್ನ ಎತ್ತಿಹಿಡಿದಿದೆ.