ಸಮಗ್ರ ನ್ಯೂಸ್: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”ಕ್ಕೆ ನಾಡು ಇಂದು ಸಾಕ್ಷಿಯಾಗಲಿದೆ.
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಡೆಯಲಿರುವ ಈ ಅರ್ಥಪೂರ್ಣ ಕಾರ್ಯಕ್ರಮದ ಹೊಣೆಗಾರಿಕೆ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೇಲಿದೆ.
ಜಿಲ್ಲಾ ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಕಾಳಜಿ ಈ ಜನತಾ ದರ್ಶನದ ಹಿಂದಿದೆ.
ಪ್ರತಿ ಜಿಲ್ಲೆಯಲ್ಲೂ ಜನತಾ ದರ್ಶನ ನಡೆಯುವ, ನಡೆಸುವ ಬಗ್ಗೆ ಸಾರ್ವಜನಿಕರಿಗೆ ಈಗಾಗಲೇ ತಿಳಿವಳಿಕೆ ನೀಡಲಾಗಿದೆ. ನಿಗದಿತ ಸ್ಥಳದಲ್ಲಿ ನಿಗದಿತ ಸಮಯಕ್ಕೆ ಸರಿಯಾಗಿ ಜನತಾ ದರ್ಶನ ಆರಂಭವಾಗಬೇಕು ಎನ್ನುವ ಸೂಚನೆ ಸರ್ಕಾರದ ಕಡೆಯಿಂದ ಹೋಗಿದೆ. ಇಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ಈ ಅಹವಾಲುಗಳಿಗೆ ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಒದಗಿಸುವುದು ಪ್ರಥಮ ಆಧ್ಯತೆಯಾಗಿರುತ್ತದೆ. ತಾಂತ್ರಿಕ ಕಾರಣಗಳಿಂದ ಇದು ಸಾಧ್ಯವಾಗದಿದ್ದರೆ ಸಾರ್ವಜನಿಕರ ಅಹವಾಲುಗಳು ಸ್ಥಳದಲ್ಲೇ ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ವರ್ಗಾವಣೆಗೊಳ್ಳುತ್ತವೆ. ಎಲ್ಲದಕ್ಕೂ ಕಾಲ ಮಿತಿಯಲ್ಲಿ ಪರಿಹಾರ ಒದಗಿಸುವ ಮತ್ತು ಸಾರ್ವಜನಿಕರು ನೀಡಿದ ಅಹವಾಲಿನ ಸ್ಥಿತಿಗತಿಯನ್ನು ಅರ್ಜಿದಾರರಿಗೆ ಮನವರಿಕೆ ಮಾಡಿಸುವ ಜವಾಬ್ದಾರಿ ಕೂಡ ಜಿಲ್ಲಾಡಳಿತದ ಮೇಲೆ ಇರುತ್ತದೆ.