ಸಮಗ್ರ ನ್ಯೂಸ್: ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.
ಮಂಡ್ಯದ ಲೋಕೋಪಯೋಗಿ ಇಲಾಖೆ ಇಇ ಆಗಿರುವ ಹರ್ಷಾ ಅವರ ಕಚೇರಿ, ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ,ಸಂಬಂಧಿಕರ ಮನೆಗಳು, ಮಂಡ್ಯದ ಕಚೇರಿ, ಕಲ್ಲಹಳ್ಳಿಯಲ್ಲಿರುವ ಮಾವನ ಮನೆ, ನಾಗಮಂಗಲದಲ್ಲಿರುವ ಫಾರ್ಮ್ಹೌಸ್ ಮೇಲೆ ದಾಳಿ ನಡೆಸಿದ್ದಾರೆ.
ಹಾಸನದ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಫುಡ್ ಇನ್ಸ್‌ಪೆಕ್ಟರ್ ಜಗನ್ನಾಥ್ ನಿವಾಸದ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಕಚೇರಿ ಹಾಗೂ ನಿವಾಸದಲ್ಲಿ ತಲಾಶ್ ಕೈಗೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ತರೀಕೆರೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. 13 ವರ್ಷದಿಂದ ಅಧಿಕ ಅಸ್ತಿ ಹೊಂದಿರುವ ಆರೋಪದಡಿಯಲ್ಲಿ ಲೋಕಾಯುಕ್ತ ಇನ್ಸ್ ಸ್ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ಕಡೂರು ಪಟ್ಟಣದಲ್ಲಿರುವ ನೇತ್ರಾವತಿ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲನೆ ಮಾಡಲಾಗುತ್ತಿದೆ.
ಮುಡಾ ಇಂಜಿನಿಯರ್ ಯಜ್ಞೇಂದ್ರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಮೈಸೂರಿನ ಜೆ.ಪಿ.ನಗರದ ಮನೆ, ವಿಜಯನಗರದ ಅಪಾರ್ಟ್‌ಮೆಂಟ್, ಕೆ.ಆರ್.ನಗರ ತಾಲೂಕಿನ ನಗರ್ಲೆ ಗ್ರಾಮದಲ್ಲಿರುವ ಯಜ್ಞೇಂದ್ರ ಸಹೋದರನ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.
ತುಮಕೂರಿನ ಶಿರಾ ಗೇಟ್ ಬಳಿಯಿರುವ KRDL ಇಂಜಿನಿಯರ್ ಹನುಮಂತರಾಯಪ್ಪ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.