ಸಮಗ್ರ ನ್ಯೂಸ್ :: ಬೆಂಗಳೂರಿನಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಇದೀಗ ಸಿಸಿಬಿ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 46 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಲೊರೊಟೊ ಬರೆಕಾಡು ನಿವಾಸಿ ಅಬ್ದುಲ್ ಸಮದ್ ಯಾನೆ ಚಮ್ಮು (36) ಎಂದು ಗುರುತಿಸಲಾಗಿದೆ.
ಈತನಿಂದ 2,30,000 ರೂ. ಮೌಲ್ಯದ 46 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 2,40,500 ಆಗಬಹುದು ಎಂದು ಅಂದಾಜಿಸಲಾಗಿದೆ.
ಆರೋಪಿಯ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯ ವಿರುದ್ಧ ಈ ಹಿಂದೆ ಉಳ್ಳಾಲ ಠಾಣೆಯಲ್ಲಿ ಪೋಕ್ಸೊ ಹಾಗೂ ಮಾದಕ ವಸ್ತು ಮಾರಾಟದ ಪ್ರಕರಣ ದಾಖಲಾಗಿರುತ್ತದೆ. ಮಂಗಳೂರು ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್, ಎಸ್ಸೈಗಳಾದ ಶರಣಪ್ಪ ಭಂಡಾರಿ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.