ಸಮಗ್ರ ನ್ಯೂಸ್: ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಜೆಡಿಎಸ್‍ಗೆ ಬಿಟ್ಟುಕೊಟ್ಟಿದ್ದು, ಇಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಕಣಕ್ಕಿಳಿಯುತ್ತಾರೋ ಇಲ್ಲವೋ ಎಂಬ ಬಗ್ಗೆ ಸೋಮವಾರ ನಿರ್ಧಾರವಾಗಲಿದೆ. ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಈ ವಿಷಯ ತಿಳಿಸಿದ್ದಾರೆ.
ಚೆನ್ನೈನಲ್ಲಿ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಬೆಂಗಳೂರಿನ ನಿವಾಸಕ್ಕೆ ಮರಳಿದರು. ಈ ವೇಳೆ ಜೆ.ಪಿ.ನಗರದ ಮನೆಯ ಎದುರು ದೊಡ್ಡ ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ನೆರೆದಿದ್ದರು. ಅವರು, ಕುಮಾರಸ್ವಾಮಿಯೇ ಮಂಡ್ಯದಿಂದ ಸ್ಪರ್ಧಿಸಬೇಕು ಎಂದು ಒತ್ತಾಯಿಸುತ್ತಿದ್ದರು.
ಈ ವೇಳೆ ಮಾತನಾಡಿದ ನಿಖಿಲ್, ತಂದೆಯವರು ಹೃದಯದ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಈಗಷ್ಟೇ ಮನೆಗೆ ಬಂದಿದ್ದಾರೆ. ಅವರಿಗೆ ಒಂದು ದಿನ ಕಾಲಾವಕಾಶ ಕೊಡಿ ಸೋಮವಾರದ ಸಂಜೆ ವೇಳೆಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.
ಸೋಮವಾರ ಚನ್ನಪಟ್ಟಣ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಮಂಡ್ಯದಲ್ಲಿ ತಂದೆಯವರೇ ಚುನಾವಣೆಗೆ ನಿಲ್ಲಬೇಕು ಎಂಬ ಒತ್ತಡ ಇದೆ. ನಮ್ಮ ಕುಟುಂಬದಿಂದ ಚುನಾವಣೆಗೆ ಸ್ಪರ್ಧೆ ಬೇಡ ಎಂದು ಭಾವಿಸಲಾಗಿತ್ತು. ಆದರೆ ಮಂಡ್ಯದ ಪರಿಸ್ಥಿತಿಯೇ ಬೇರೆ ಇದೆ. ಹೀಗಾಗಿ ಕುಮಾರಸ್ವಾಮಿ ಅವರ ಮೇಲೆ ಒತ್ತಡ ಹಾಕಲಾಗುತ್ತಿದೆ ಎಂದು ತಿಳಿಸಿದರು.
ಬಳಿಕ ಮಾತನಾಡಿದ ಕುಮಾರಸ್ವಾಮಿ, ಮಂಡ್ಯದಲ್ಲಿ ನನಗೆ ವಿಶೇಷ ಪ್ರೀತಿ ವಿಶ್ವಾಸ ಸಿಕ್ಕಿದೆ. ನಾನು ಈ ಪ್ರೀತಿಯನ್ನು ಮರೆಯಲು ಸಾಧ್ಯವಿಲ್ಲ. ನನಗೆ ಈವರೆಗೆ ಮೂರು ಬಾರಿ ಹೃದಯದ ಶಸ್ತ್ರಚಿಕಿತ್ಸೆ ಆಗಿದೆ. ಆರೋಗ್ಯದ ಜತೆಗೆ ಪಕ್ಷದ ಕೆಲಸ, ಜನರ ಸೇವೆ ಮಾಡಬೇಕಿದೆ. ನಿಮಗೆ ನಿರಾಶೆ ಮಾಡುವುದಿಲ್ಲ ಎಂದರು.