ಸಮಗ್ರ ನ್ಯೂಸ್: ಮಂಡ್ಯ ಜೆಡಿಎಸ್ ಅಭ್ಯರ್ಥಿ ಕುಮಾರಸ್ವಾಮಿ ಅವರು ಸಂಸದೆ ಸುಮಲತಾ ನಿವಾಸಕ್ಕೆ ಭೇಟಿ ನೀಡಿ ಮಂಡ್ಯ ಕ್ಷೇತ್ರಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ ನಂತರ ಏ.3 ರಂದು ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸುಮಲತಾ ಹೇಳಿದ್ದರು. ಈ ಬೆನ್ನಲ್ಲೇ ಸುಮಲತಾ ಫೇಸ್ ಬುಕ್ ನಲ್ಲಿ ಮತ್ತೊಂದು ಪೋಸ್ಟ್ ಮಾಡಿದ್ದು, ನಾಳೆ ನನ್ನ ನಿರ್ಧಾರ ತಿಳಿಸುತ್ತೇನೆ ಎಂದಿದ್ದಾರೆ.
‘ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ.ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ.’
‘ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ದ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ತಿಳಿಸಿದ್ದಾರೆ.