ಸಮಗ್ರ ನ್ಯೂಸ್: ಬೆಂಗಳೂರಿನ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಬಾಲಕಿಯರ ಹಾಸ್ಟೆಲ್‌ನ 47 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದು, 28 ವಿದ್ಯಾರ್ಥಿನಿಯರಿಗೆ ಟ್ರಾಮಾ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಐವರಿಗೆ ಹೆಚ್ ಬ್ಲಾಕ್ ಹಾಗೂ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಕಾಲರಾದಿಂದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ಸಹಪಾಠಿಗಳು ಹೇಳುತ್ತಿದ್ದಾರೆ. ಇನ್ನೊಂದು ಕಡೆ ಬೆಂಗಳೂರಿನಲ್ಲಿ ಹೆಚ್ಚು ತಾಪಮಾನ ನಡುವೆ ಕಾಲರಾ ಭೀತಿಯು ಶುರುವಾಗಿದೆ.
ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ವಿದ್ಯಾರ್ಥಿನಿಯರ ಆರೋಗ್ಯ ಉತ್ತಮವಾಗಿದೆ. ವಿದ್ಯಾರ್ಥಿನಿಯರು ಅಸ್ವಸ್ಥಗೊಳ್ಳಲು ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಬಿಎಂಸಿಆರ್‌ಐ ಮುಖ್ಯಸ್ಥ ಮತ್ತು ನಿರ್ದೇಶಕ ಡಾ.ರಮೇಶ್ ಕೃಷ್ಣ ತಿಳಿಸಿದ್ದಾರೆ.
ಹಾಸ್ಟೆಲ್ ನಲ್ಲಿ ಕಲುಷಿತ ನೀರು ಸೇವಿಸಿದ್ದರಿಂದ ಕಾಲರಾ ಕಾಣಿಸಿಕೊಂಡಿದೆ ಎಂದು ವಿದ್ಯಾರ್ಥಿನಿಯರು ಹೇಳುತ್ತಿದ್ದಾರೆ. ಸದ್ಯ ಎಲ್ಲಾ ಹಾಸ್ಟೆಲ್ ವಿದ್ಯಾರ್ಥಿನಿಯರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ವರದಿ ಬಳಿಕ ನಿಖರ ಕಾರಣ ತಿಳಿದು ಬರಲಿದೆ.