ಸಮಗ್ರ ನ್ಯೂಸ್: ಬರ ಪರಿಹಾರ ಬಿಡುಗಡೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕೇಂದ್ರಕ್ಕೆ ಯಾವುದೇ ನಿರ್ದೇಶನ ನೀಡಿಲ್ಲ. ಕೇಂದ್ರ ಸರ್ಕಾರವೇ ಚುನಾವಣಾ ಆಯೋಗದ ಅನುಮತಿ ಕೇಳಿದ್ದು, ಅದಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿದೆ. ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತಂದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.
ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದನ್ನೇ ಕಾಂಗ್ರೆಸ್ ಪಕ್ಷ ತಮಗೆ ಸಿಕ್ಕ ವಿಜಯ ಎಂಬಂತೆ ಬಿಂಬಿಸಿಕೊಳ್ಳುತ್ತಿದೆ ಎಂದು ಕುಟುಕಿದರು.
ರಾಜ್ಯದಲ್ಲಿ ಹಿಂದೂಗಳ ಮೇಲೆ ಹಲ್ಲೆ, ದೌರ್ಜನ್ಯ ಮತ್ತು ಹತ್ಯೆಯಂತಹ ಘಟನೆಗಳಿಂದ ಜನತೆ ರೊಚ್ಚಿಗೆದ್ದಿದ್ದು, ಅವರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್‌ನವರು ವಿಧಾನಸೌಧದ ಆವರಣದಲ್ಲಿ ಬರ ಪರಿಹಾರದ ವಿಚಾರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ತಿಳಿಸಿದರು.
ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿಲ್ಲ, ನಿರ್ದೇಶನವನ್ನೂ ನೀಡಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಮಾತ್ರ ಸಂಭ್ರಮ ಆಚರಿಸುತ್ತಿದೆ. ಚುನಾವಣಾ ಆಯೋಗದ ತಡೆ ಇದ್ದ ಕಾರಣಕ್ಕೆ ಕೇಂದ್ರ ಪರಿಹಾರ ಬಿಡುಗಡೆ ಮಾಡಿರಲಿಲ್ಲ, ಸುಪ್ರೀಂಕೋರ್ಟ್‌ನಲ್ಲಿಈ ವಿಚಾರ ಬಂದಾಗ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಅನುಮತಿ ಕೇಳುತ್ತೇವೆ ಎಂದು ಹೇಳಿತ್ತು. ಆ ಬಳಿಕ ಅನುಮತಿ ಕೇಳಿತ್ತು. ಆಯೋಗ ಅನುಮತಿ ನೀಡಿದೆ. ಅದನ್ನು ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ ತಿಳಿಸಿದೆ. ಇದರಲ್ಲಿ ಕಾಂಗ್ರೆಸ್ನದು ಒಂದು ಕಾಳಿನಷ್ಟೂ ಪ್ರಯತ್ನವೂ ಇಲ್ಲ ಎಂದರು.