ಸಮಗ್ರ ನ್ಯೂಸ್ : ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಕರ್ನಾಟಕ ಮಾತ್ರವಲ್ಲದೆ ತಮಿಳುನಾಡಿಗೆ ಚಂಡಮಾರುತ ಹಾಗೂ ಪ್ರವಾಹ ಪರಿಹಾರವೆಂದು 275 ಕೋಟಿ ರೂ. ನೀಡಿದೆ.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ರೂ. ಹಣದ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರದ ಹಿನ್ನೆಲೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‍ನ ಮೊರೆ ಹೋಗಿತ್ತು. ಬಳಿಕ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂಕೋರ್ಟ್‍ಗೆ ಹೇಳಿತ್ತು. ಅದರಂತೆ ಇದೀಗ ಕೇಂದ್ರ ಸರ್ಕರ ಬರ ಪರಿಹಾರ ಘೋಷಣೆ ಮಾಡಿದೆ.
ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ 22 ರಂದು ನ್ಯಾ.ಬಿ.ಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತ್ತು. ವಿಚಾರಣೆ ಆರಂಭವಾಗುತ್ತಿದ್ದಂತೆ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ, ಚುನಾವಣಾ ಆಯೋಗದ ಜೊತೆಗೆ ಈ ಬಗ್ಗೆ ಚರ್ಚಿಸಲಾಗಿದ್ದು, ಬರ ಪರಿಹಾರ ಬಿಡುಗಡೆಗೆ ಆಯೋಗ ಅನುಮತಿ ನೀಡಿದೆ. ಹೀಗಾಗಿ ಈ ವಾರದೊಳಗೆ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದರು.