ಸಮಗ್ರ ನ್ಯೂಸ್ : ಕಾಂಗ್ರೆಸ್‌ಗೆ ಮುಸ್ಲಿಮರ ಮತ ಬೇಕು. ಆದರೆ ಮುಸ್ಲಿಮ್ ಅಭ್ಯರ್ಥಿ ಬೇಡ ಎಂದು ಹೇಳಿರುವ ನಸೀಮ್ ಖಾನ್ ಪಕ್ಷದ ವಿರುದ್ಧ ಸಿಟ್ಟಾಗಿದ್ದು ನಾನು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಿಲ್ಲ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಮಹಾ ವಿಕಾಸ್ ಅಘಾಡಿ ಯಾವುದೇ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ಪ್ರಚಾರದಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಉತ್ತರ ಪ್ರದೇಶದ (80) ನಂತರ ಮಹಾರಾಷ್ಟ್ರದಲ್ಲಿ(48) ಅತಿ ಹೆಚ್ಚು ಲೋಕಸಭಾ ಕ್ಷೇತ್ರಗಳಿವೆ. ಎನ್‌ಸಿಪಿ-ಎಸ್‌ಪಿ, ಕಾಂಗ್ರೆಸ್ ಮತ್ತು ಶಿವಸೇನಾ ಯುಬಿಟಿಯನ್ನು ಒಳಗೊಂಡಿರುವ ಎಂವಿಎ ಒಕ್ಕೂಟ ಹೊಂದಿರುವ ಮಹಾರಾಷ್ಟ್ರದಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿಲ್ಲ.
ಈ ವಿಷಯವನ್ನು ಎತ್ತುತ್ತಿರುವ ಮಹಾರಾಷ್ಟ್ರದ ಮುಸ್ಲಿಮರಿಗೆ ತನ್ನ ಬಳಿ ಉತ್ತರವಿಲ್ಲ ಎಂದು ಹೇಳಿದ ಖಾನ್ ಮಹಾರಾಷ್ಟ್ರ ಕಾಂಗ್ರೆಸ್ ಪ್ರಚಾರ ಸಮಿತಿಗೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಮಹಾರಾಷ್ಟ್ರದ 48 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ.
ನಸೀಮ್ ಖಾನ್ ಮುಂಬೈ ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ಈ ಕ್ಷೇತ್ರಕ್ಕೆ ನಗರ ಘಟಕದ ಅಧ್ಯಕ್ಷೆ ವರ್ಷಾ ಗಾಯಕ್ವಾಡ್ ಅವರಿಗೆ ಟಿಕೆಟ್ ನೀಡಿದೆ.