ಸಮಗ್ರ ನ್ಯೂಸ್: ಮರಾಠಾವಾಡದಿಂದ ಕೊಮೊರಿನ್ ಪ್ರದೇಶದವರೆಗೆ ವಾಯುಭಾರ ಕುಸಿತ ಉಂಟಾಗಿದೆ. ಇದು ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಕೆಲವು ಸ್ಥಳಗಳಲ್ಲಿ ಗಾಳಿ ವೇಗವು 40-50 ಕಿ.ಮೀನಲ್ಲಿ ಇರಲಿದ್ದು, ಇದರೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಮುಖ್ಯವಾಗಿ ಹಾವೇರಿ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ದಾವಣಗೆರೆಯಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಜತೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಇನ್ನೂ ಬಾಗಲಕೋಟೆ, ಗದಗ, ಕೊಪ್ಪಳ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ವಿಜಯನಗರದಲ್ಲೂ ಇದೇ ಪರಿಸ್ಥಿತಿ ಇರಲಿದೆ.