ಮಂಗಳೂರು (ಜು. 30): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಕಡಿಮೆಯಾಯ್ತು ಎನ್ನುವಷ್ಟರಲ್ಲಿ ಮೂರನೇ ಅಲೆ ಶುರುವಾಗುವ ಆತಂಕ ಎದುರಾಗಿದೆ. ಪಕ್ಕದ ಕೇರಳ ರಾಜ್ಯದಲ್ಲಿ ಕೊರೊನಾ ಕೇಸ್ ಭಾರೀ ಸಂಖ್ಯೆಯಲ್ಲಿ ಹೆಚ್ಚಳ ಹಿನ್ನಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣಕನ್ನಡದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಸಿ.ಎಂ ಬಸವರಾಜ ಬೊಮ್ಮಾಯಿ ಸೂಚನೆ ಹಿನ್ನಲೆಯಲ್ಲಿ ಸ್ವತಃ ಜಿಲ್ಲಾಧಿಕಾರಿಗಳೆ ಗಡಿಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.
ಗಡಿ ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನಲೆ ಆತಂಕ ವ್ಯಕ್ತಪಡಿಸಿರುವ ಸಿಎಂ ಸೋಂಕು ನಿಯಂತ್ರಣ ಸಂಬಂಧ ನಾಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬೆಂಗಳೂರು, ದಕ್ಷಿಣ ಕನ್ನಡ, ಚಿಕ್ಕಮಗಳೂರು ,ಶಿವಮೊಗ್ಗ , ಉಡುಪಿ, ಮತ್ತು ಚಾಮರಾಜನಗರ ಜಿಲ್ಲೆಗಳ ಡಿಸಿ, ಎಸ್ ಪಿ , ಸಿಇಓ ಗಳ ಜೊತೆ ಇಂದು ಸಂಜೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ರಾಜ್ಯದ ಜನತೆ ಕೋವಿಡ್ ಎರಡನೇ ಅಲೆಯಿಂದ ತತ್ತರಿಸಿದ್ದು ಇದೀಗ ಒಂದು ಹಂತಕ್ಕೆ ಸಹಜ ಸ್ಥಿತಿಗೆ ಬರುತ್ತಿದ್ದಾರೆ. ಆದರೆ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮೂರನೇ ಅಲೆಯ ಭೀತಿ ಶುರುವಾಗಿದೆ. ಯಾಕೆಂದರೆ ಕೇರಳದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಿದೆ.
ಹೀಗಾಗಿ ಜಿಲ್ಲೆಯ ತಲಪಾಡಿ ಗಡಿ ಸೇರಿದಂತೆ 18 ಕ್ಕೂ ಹೆಚ್ಚು ಕಡೆ ಚೆಕ್ ಪೋಸ್ಟ್ ತೆರೆದು ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರ ತಪಾಸಣೆ ನಡೆಯುತ್ತಿದೆ. ಶುಕ್ರವಾರ ಸ್ವತ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಲಪಾಡಿ ಗಡಿಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದರು. ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಪಾಸಿಟಿವ್ ಕೇಸ್ ಹೆಚ್ಚಾಗುತ್ತಿದೆ.
ದಕ್ಷಿಣ ಕನ್ನಡದಲ್ಲಿ ಒಂದೇ ದಿನದಲ್ಲಿ 396 ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಜಿಲ್ಲಾಡಳಿತ ಅಲರ್ಟ್ ಆಗಿದೆ.