ಸಮಗ್ರ ನ್ಯೂಸ್: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಭವಾನಿ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.
ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ನಿರಾಕರಿಸಿ ಆರು ದಿನ ಎಸ್ಐಟಿ ವಶಕ್ಕೆ ನೀಡಿದ ಬೆನ್ನಲ್ಲೇ ಅವರ ತಾಯಿ ಭವಾನಿ ಅವರಿಗೆ ಆಘಾತ ಎದುರಾಗಿದೆ. ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ವಜಾಗೊಂಡಿರುವ ಕಾರಣ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸುವ ಸಾಧ್ಯತೆಗಳಿವೆ.
ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಪೊಲೀಸರು ಭವಾನಿ ಅವರಿಗೆ ತನಿಖೆಗೆ ಹಾಜರಾಗುವಂತೆ 15 ದಿನಗಳ ಹಿಂದೆ ನೋಟಿಸ್ ನೀಡಿದ್ದರು. ಅದಕ್ಕೆ ಪ್ರತಿಕ್ರಿಯಿಸದ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಏತನ್ಮಧ್ಯೆ ಶುಕ್ರವಾರ ಬೆಳಗ್ಗೆ ಎಸ್ಐಟಿ ಅಧಿಕಾರಿಗಳೂ ಭವಾನಿ ಅವರಿಗೆ ಎರಡನೇ ನೋಟಿಸ್ ನೀಡಿದ್ದರು. ಅವರು ಮನೆಯಲ್ಲಿ ಇಲ್ಲದ ಕಾರಣ ನೋಟಿಸ್ ಅಂಟಿಸಿ ಬಂದಿದ್ದರು. ಇದೀಗ ಕೋರ್ಟ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.