ಸಮಗ್ರ ನ್ಯೂಸ್: ಮುಂಗಾರು ಮಾರುತಗಳು ರಾಜ್ಯಕ್ಕೆ ಪ್ರವೇಶಿಸಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರಿ ವರ್ಷಧಾರೆ ಆರಂಭವಾಗಿದೆ. ಮುಂದಿನ 24 ಗಂಟೆಗಳ ಕಾಲ ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಅಲ್ಲದೆ ಬೆಂಗಳೂರಿನಲ್ಲಿ ಸೋಮವಾರ ಸುರಿದ ಮಳೆ 133 ವರ್ಷದ ದಾಖಲೆಯನ್ನೇ ನಿರ್ಮಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರದಲ್ಲಿ ಯೆಲ್ಲೋ ಅಲರ್ಟ್ ನೀಡಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬಿರುಗಾಳಿ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ. ಶಿವಮೊಗ್ಗ, ತುಮಕೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದ ಬಹುತೇಕ ಭಾಗವನ್ನು ಮುಂಗಾರು ಆವರಿಸಿದೆ. ಮಧ್ಯ ಅರೇಬಿಯನ್ ಸಮುದ್ರದ ಭಾಗಗಳು, ಕರ್ನಾಟಕ, ದಕ್ಷಿಣ ಮಹಾರಾಷ್ಟ್ರ, ಗೋವಾ, ರಾಯಲಸೀಮಾ, ತೆಲಂಗಾಣ, ಆಂಧ್ರ ಪ್ರದೇಶ, ದಕ್ಷಿಣ ಛತ್ತೀಸ್‍ಗಢ ಮತ್ತು ದಕ್ಷಿಣ ಒಡಿಶಾದ ಕೆಲವು ಭಾಗಗಳಿಗೆ ನೈಋತ್ಯ ಮಾನ್ಸೂನ್ ಆವರಿಸಿದೆ. ಮುಂದಿನ 4-5 ದಿನಗಳಲ್ಲಿ ಪಶ್ಚಿಮ ಕೇಂದ್ರ ಮತ್ತು ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ಮುಂಗಾರು ಮಾರುತಗಳು ಅವರಿಸಲಿವೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್.ಪುವಿಯರಸನ್ ಹೇಳಿದ್ದಾರೆ.