ಸಮಗ್ರ ನ್ಯೂಸ್: ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ನಡೆದ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಾಧಿಕಾರ ರಚನೆಗೆ ನಿರ್ಧಾರ ಕೈಗೊಳ್ಳಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅವಧಿ ಮಾರ್ಚ್‌ಗೆ ಕೊನೆಗೊಂಡಿದ್ದು, ಸದ್ಯ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ. ಸಭೆಯಲ್ಲಿ ವ್ಯವಸ್ಥಾಪನ ಸಮಿತಿ ರಚನೆಗೆ ಅಧಿಸೂಚನೆ ಹೊರಡಿಸುವ ನಿರ್ಧಾರ ನಿರೀಕ್ಷೆಯಲ್ಲಿತ್ತು. ಆದರೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ 100 ಕೋಟಿಗೂ ಅಧಿಕ ಆದಾಯ ಬರುವ ಕ್ಷೇತ್ರವಾಗಿರುವುದರಿಂದ ಅಭಿವೃದ್ಧಿ ಪ್ರಾಧಿಕಾರ ಮಾಡುವ ಬಗ್ಗೆ ಸಚಿವರು ಆಸಕ್ತಿ ತಳೆದಿದ್ದಾರೆ.
ಈ ಹಿನ್ನೆಲೆಯಲ್ಲಿ ವ್ಯವಸ್ಥಾಪನ ಸಮಿತಿ ರಚಿಸುವ ಪ್ರಸ್ತಾವವನ್ನು ಕೈಬಿಡಲಾಗಿದೆ. ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ರಚನೆ ಬಗ್ಗೆ ಪ್ರಸ್ತಾವ ಸಿದ್ಧಗೊಳಿಸಿ ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಚರ್ಚಿಸಿ, ಅಂತಿಮ ನಿರ್ಧಾರ ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಅವರು ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸೌತಡ್ಕ, ಪುತ್ತೂರು, ನೆಟ್ಲ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.