ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ & ಅರಬ್ಬಿ ಸಮುದ್ರದಲ್ಲಿ ಮೇಲುಬ್ಬರ ಉಂಟಾದ ಕಾರಣ, ಕರ್ನಾಟಕದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಇಂದಿನಿಂದ ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆರಾಯ ಆರ್ಭಟ ತೋರಿಸಲಿದ್ದಾನೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಜಿಲ್ಲೆ ಸೇರಿದಂತೆ ಚಿಕ್ಕಮಗಳೂರು, ಕೊಡಗು, ಹಾಸನದ ಮಲೆನಾಡು ಭಾಗ ಸೇರಿದಂತೆ ಹಲವಾರು ಜಿಲ್ಲೆಗಳಿಗೆ ಭಾರಿ ಮಳೆ ಬೀಳುವ ಮುನ್ನೆಚ್ಚರಿಕೆ ನೀಡಲಾಗಿದೆ.
ಕರ್ನಾಟಕದ ಆರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚು ಸುರಿಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.