ಸಮಗ್ರ ನ್ಯೂಸ್: ದೀಪಾವಳಿ ಹಬ್ಬಕ್ಕೆ ವರುಣ ಬಂಪರ್ ಕೊಡುಗೆ ನೀಡಿದ್ದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಸೇರಿ 9 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ನವೆಂಬರ್ 1 ಮತ್ತು 2 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದರೆ, ಅಕ್ಟೋಬರ್ 31 ರಂದು ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗಲಿದೆ. ನಂತರ ಎರಡು ದಿನ ಅತಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳ ಕೆಲವೆಡೆ ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಇನ್ನುಳಿದ ದಿನಗಳಲ್ಲಿಮಳೆ ಕೊಂಚ ಕಡಿಮೆಯಾಗುವ ಸಾಧ್ಯತೆಯಿದೆ.
ಅಲ್ಲದೆ, ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ವಿಜಯನಗರ, ಧಾರವಾಡ, ಬೀದರ್, ಬೆಳಗಾವಿ, ಯಾದಗಿರಿ, ಕಲಬುರಗಿ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಳೆಯೊಂದಿಗೆ ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ಚಳಿಯೂ ಇರಲಿದೆ ಎಂದು ಇಲಾಖೆ ತಿಳಿಸಿದೆ.