ಸಮಗ್ರ ನ್ಯೂಸ್:ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಮಸೀದಿ ಸಮೀಕ್ಷೆಯ ವೇಳೆ ನಡೆದ ಹಿಂಸಾಚಾರ ಪ್ರಕರಣದಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಸಂಭಾಲ್ ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸರ್ವೆಗೆ ನ್ಯಾಯಾಲಯ ಆದೇಶ ನೀಡಿತ್ತು.ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸರ್ವೆಗೆ ಮುಂದಾಗಿದ್ದ ವೇಳೆ ಉದ್ರಿಕ್ತರು ಕಲ್ಲುತೂರಾಟ ನಡೆಸಿದ್ದರು.ಸ್ಥಳೀಯರು ಮತ್ತು ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾಗಿತ್ತು. ಇದರಿಂದಾಗಿ ಸಾಂಭಾಲ್ ನಲ್ಲಿ ಸಂಪೂರ್ಣ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ನ.20ರಂದು ಮಸೀದಿ ಸಮೀಕ್ಷೆಗೆ ಬಂದಿದ್ದ ವೇಳೆ ಪ್ರತಿಭಟನಾಕಾರರು ಕೆಲವು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರ ಮೇಲೆ ಕಲ್ಲು ಎಸೆದಿದ್ದಾರೆ. ಈ ವೇಳೆ ಗುಂಪು ಚದುರಿಸಲು ಭುಗಿಲೆದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಸುಮಾರು 20 ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ. ಗಲಭೆಗೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ 21 ಜನರನ್ನು ಬಂಧಿಸಲಾಗಿದೆ.ನವೆಂಬರ್ 30 ರವರೆಗೆ ಯಾವುದೇ ಹೊರಗಿನವರು, ಸಾಮಾಜಿಕ ಸಂಸ್ಥೆಗಳು ಅಥವಾ ಸಾರ್ವಜನಿಕ ಪ್ರತಿನಿಧಿಗಳು ಅಧಿಕಾರಿಗಳ ಆದೇಶವಿಲ್ಲದೆ ಸಂಭಾಲ್‌ಗೆ ಪ್ರವೇಶಿಸುವುದನ್ನು ಅಧಿಕಾರಿಗಳು ನಿರ್ಬಂಧಿಸಿದ್ದಾರೆ.