ಸಮಗ್ರ ನ್ಯೂಸ್: ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಎ.18, 20, 21ರಂದು ಕರಾವಳಿ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆಯು “ಎಲ್ಲೋ ಅಲರ್ಟ್’ ಘೋಷಿಸಿದೆ. ಈ ವೇಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿಯೂ ಗುಡುಗು ಸಹಿತ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ.
ಮಂಗಳೂರು ಸಹಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಗುರುವಾರ ಬಿಸಿಲು, ಮೋಡದಿಂದ ಕೂಡಿದ ವಾತಾವರಣ ಇತ್ತು. ಕೆಲವೆಡೆ ಮೋಡ ಹೆಚ್ಚಿದ್ದರೂ ಮಳೆಯಾಗಲಿಲ್ಲ. ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಅಪರಾಹ್ನ ಮಳೆಯಾಗಿತ್ತು. ಮಂಗಳೂರಿನಲ್ಲಿ 33 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿದ್ದರೆ, 26.1 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಲ್ಲಿ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಶಿವಮೊಗ್ಗ, ಬಳ್ಳಾರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವಾಮಾನವಿರುತ್ತದೆ.