ಸಮಗ್ರ ನ್ಯೂಸ್: ಬಹು ನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, 14ರಂದು ಮತ ಎಣಿಕೆ ಮಾಡಲಾಗುತ್ತದೆ.
ಸೋಮವಾರ (ಅ.6) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ನವೆಂಬರ್ 6ರಂದು ಮೊದಲ ಹಂತದಲ್ಲಿ 121 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಕುರಿತು ಅಕ್ಟೋಬರ್ 10ರಂದು ಅಧಿಸೂಚನೆ ಹೊರಡಿಸಲಾಗುವುದು. ಅಕ್ಟೋಬರ್ 17 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ ಮತ್ತು ಉಮೇದುವಾರಿಕೆ ಹಿಂಪಡೆಯಲು ಅಕ್ಟೋಬರ್ 20 ಕೊನೆಯ ದಿನವಾಗಿದೆ ಎಂದು ತಿಳಿಸಿದ್ದಾರೆ.
ನವೆಂಬರ್ 11ರಂದು ಎರಡನೇ ಹಂತದಲ್ಲಿ, 122 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಬಗ್ಗೆ ಅಕ್ಟೋಬರ್ 13ರಂದು ಅಧಿಸೂಚನೆ ಹೊರಡಿಸಲಾಗುವುದು. ಎರಡನೇ ಹಂತದ ನಾಮಪತ್ರ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನವಾಗಿದೆ. ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕ ಅಕ್ಟೋಬರ್ 23 ಆಗಿದೆ ಎಂದು ಜ್ಞಾನೇಶ್ ಕುಮಾರ್ ಹೇಳಿದ್ದಾರೆ.
ನವೆಂಬರ್ 14 ರಂದು ಮತಗಳ ಎಣಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ. 22 ವರ್ಷಗಳಲ್ಲಿ ಮೊದಲ ಬಾರಿಗೆ ನಡೆಸಲಾದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಶಸ್ವಿಯಾಗಿ ಪಟ್ಟಿಯನ್ನು ‘ಶುದ್ಧೀಕರಿಸಿದೆ’ ಎಂದು ಜ್ಞಾನೇಶ್ ಕುಮಾರ್ ಹೇಳಿದ್ದಾರೆ.
ಉಳಿದಿರುವ ಯಾವುದೇ ದೋಷಗಳಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಮೇಲ್ಮನವಿ ಸಲ್ಲಿಸಬಹುದು. ನಿಖರತೆ ಮತ್ತು ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಎಸ್‌ಐಆರ್ ಕುರಿತ ಆಕ್ಷೇಪಣೆಗಳಿಗೆ ಬಾಗಿಲು ತೆರೆದಿರುತ್ತದೆ ಎಂದಿದ್ದಾರೆ.
ಎಸ್ಐಆರ್ ನಂತರದ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ. ನಾಮಪತ್ರ ಸಲ್ಲಿಸುವ ದಿನಾಂಕದ ನಂತರ ಬಿಡುಗಡೆಯಾಗಲಿರುವ ಮತದಾರರ ಪಟ್ಟಿ ಅಂತಿಮವಾಗಿರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.







