ಸಮಗ್ರ ನ್ಯೂಸ್: ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದು (ಅ.29) ಮಳೆ ಅಬ್ಬರಿಸುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26°C ಮತ್ತು 20°C ಇರುವ ಸಾಧ್ಯತೆ ಹೆಚ್ಚಿದೆ.
ಇನ್ನು ಅಕ್ಟೋಬರ್ 30ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45ರಿಂದ 60 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಅ.30ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಅ.31ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ನ.1ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಧಾರವಾಡ, ಗದಗ, ಬಾಗಲಕೋಟೆ, ಬೆಳಗಾವಿ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.







