ಬೆಂಗಳೂರು: ರಾಜ್ಯದಲ್ಲಿ ಮತ್ತೆ 2 ದಿನಗಳ ಕಾಲ ಮಳೆ ಆರ್ಭಟ ಮುಂದುವರೆಯಲ್ಲಿದ್ದು, ರಾಜ್ಯದ 10 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಒಟ್ಟು 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಜೋರಾಗಿ ಮಳೆ ಸುರಿಯುತ್ತಿದೆ. ಬೆಂಗಳೂರಿನಲ್ಲಿ ಕೂಡ ಸಂಜೆಯ ವೇಳೆಗೆ ಮಳೆಯಾಗುತ್ತಿದೆ. ಇನ್ನೆರಡು ದಿನ ಕರಾವಳಿಯ ಮೂರು ಜಿಲ್ಲೆಗಳು ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಹಾಗೂ ಬೆಂಗಳೂರಿನಲ್ಲಿ ಮಳೆ ಹೆಚ್ಚಾಗಲಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹವಾಮಾನ ಇಲಾಖೆ ಇಂದು ಕರ್ನಾಟಕದ 10 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕೂಡ ಇಂದು ಸಂಜೆಯ ಬಳಿಕ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ. ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಕೂಡ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ. ಈ ವೀಕೆಂಡ್ನಲ್ಲಿ ಮಲೆನಾಡು ಮತ್ತು ಕರಾವಳಿಯಲ್ಲಿ ವರುಣನ ಅಬ್ಬರ ಜೋರಾಗಿರಲಿದೆ ಎಂದು ಹೇಳಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಆ. 31ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.