ಸಮಗ್ರ ನ್ಯೂಸ್: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ವಿರುದ್ಧ ಸತತವಾಗಿ ಧ್ವನಿ ಎತ್ತುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳ ವಿರುದ್ಧ ದೂರು ನೀಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ (CCB) ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಮಾಜಿ ಆಯುಕ್ತ ಡಿ.ಬಿ. ನಟೇಶ್ ಅವರು ನೀಡಿದ ದೂರಿನ ಮೇರೆಗೆ ಸಿಸಿಬಿ ಈ ಕ್ರಮ ಕೈಗೊಂಡಿದೆ. ಡಿ.ಬಿ. ನಟೇಶ್ ಅವರು ತಮಗೆ ಮುಂಬಡ್ತಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸುಮಾರು 1.60 ಕೋಟಿ ರೂಪಾಯಿ ಲಂಚ ನೀಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಸಾರ್ವಜನಿಕವಾಗಿ ಆರೋಪಿಸಿದ್ದರು.
ಈ ಕುರಿತು ಹೇಳಿಕೆಗಳನ್ನು ನೀಡುವ ಮೂಲಕ ತಮ್ಮ ವ್ಯಕ್ತಿತ್ವಕ್ಕೆ ಕಳಂಕ ತರಲಾಗುತ್ತಿದೆ ಎಂದು ನಟೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ‘ನಾನು ಯಾವುದೇ ಹಣ ನೀಡಿಲ್ಲ, ಕೃಷ್ಣ ಅವರು ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ’ ಎಂದು ನಟೇಶ್ ದೂರಿನಲ್ಲಿ ತಿಳಿಸಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿದ್ದರು.







