ಸಮಗ್ರ ನ್ಯೂಸ್: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಎರಡು ಜೀವಗಳು ಬಲಿಯಾದ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿಂತಿದ್ದ ಪಿಕಪ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಬ್ರಹ್ಮರಕೂಟ್ಲು ಎಂಬಲ್ಲಿ ನಡೆದಿದೆ. ತಾಲೂಕಿನ ನರಿಕೊಂಬು ಮರ್ದೊಳಿ ನಿವಾಸಿ ಸಂತೋಷ್ ಮೃತರು. ಅವರು ಬೆಳಗ್ಗೆ ಮನೆಯಿಂದ ಮಂಗಳೂರಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬ್ರಹ್ಮರಕೂಟ್ಲು ಎಂಬಲ್ಲಿ ಟಯರ್ ಬ್ಲಾಸ್ಟ್ ಆಗಿದ್ದ ಕಾರಣಕ್ಕಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ.
ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಲಾಗಿದೆ.ಬಂಟ್ವಾಳ ಟ್ರಾಫಿಕ್ ಎಸ್ ಐ ಅದರ್ಶ್ ಅವರು ಭೇಟಿ ನೀಡಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ವಿಟ್ಲ ಠಾಣೆ ವ್ಯಾಪ್ತಿಯ ಕೊಡಂಗಾಯಿ ಕೆರೆಯಲ್ಲಿ ವಿದ್ಯಾರ್ಥಿನಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಕೊಡಂಗಾಯಿ ಬಳಿಯ ಮೂರುಕಜೆ ಎಂಬಲ್ಲಿನ ಮೈತ್ರೆಯಿ ಗುರುಕುಲ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿನಿ, ಬೆಂಗಳೂರು ಮೂಲದ ವೈಗ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡವರು.
ಅವರು ಫೆ. 22ರಿಂದ ನಾಪತ್ತೆಯಾಗಿದ್ದರು. ಅವರಿಗಾಗಿ ವಿವಿಧೆಡೆ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಸೋಮವಾರ ಪಕ್ಕದಲ್ಲಿರುವ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ಮಾಹಿತಿ ಅರಿತ ವಿಟ್ಲ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿ ಪರಿಶೀಲನೆ ನಡೆಸಿದರು. ಕೆರೆಯಲ್ಲಿದ್ದ ವಿದ್ಯಾರ್ಥಿನಿಯ ಮೃತದೇಹವನ್ನು ಫ್ರೆಂಡ್ಸ್ ವಿಟ್ಲದ ಮುರಳೀಧರ ಅವರ ತಂಡ ಮೇಲಕ್ಕೆತ್ತಿದ್ದು, ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.







