ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಗುರುವಾರ ಸಂಜೆ ಸಂಭವಿಸಿದ ಗುಡ್ಡ ಕುಸಿತದಲ್ಲಿ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ.
ಹುಲಿಕಲ್ ಘಾಟಿಯ ಚಂಡಿಕಾಂಬಾ ದೇವಾಲಯದ ಸಮೀಪವಿರುವ ಹೇರ್ ಪಿನ್ ತಿರುವಿನಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಗುರುವಾರ ಸಂಜೆ ಸುಮಾರು 6:30ರ ವೇಳೆಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಏಕಾಏಕಿ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ಈ ವೇಳೆ ಕೆಲಸ ಮಾಡುತ್ತಿದ್ದ ಏಳು ಮಂದಿ ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದರು.
ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು, ನಗರ ಠಾಣೆಯ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮಣ್ಣಿನಡಿ ಸಿಲುಕಿದ್ದ ನಾಲ್ವರು ಕಾರ್ಮಿಕರನ್ನು ರಕ್ಷಿಸಿ ಕೂಡಲೇ ಹೊಸನಗರ ಮತ್ತು ಉಡುಪಿಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.







