ಸರ್ಕಾರಿ ಭೂಮಿ ಅತಿಕ್ರಮಣ ಆರೋಪ| ರಾಜ್ಯಸಭಾ ಸದಸ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಗೆ ನೋಟೀಸ್ ನೀಡಲು ಆದೇಶ

ಸಮಗ್ರ ನ್ಯೂಸ್: ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ನೋಟಿಸ್ ಜಾರಿ ಮಾಡಿದೆ. ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಸೋಮನಾಥ ನಾಯಕ್ ಅವರು ಸಲ್ಲಿಸಿದ್ದ ಎರಡು ಪ್ರತ್ಯೇಕ ದೂರುಗಳನ್ನು ವಿಚಾರಣೆಗೆ ಎತ್ತಿಕೊಂಡ ನ್ಯಾಯಾಲಯವು, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಬೆಳ್ತಂಗಡಿ ಪೊಲೀಸ್ ನಿರೀಕ್ಷಕರಿಗೆ ಸೂಚನೆ ನೀಡಿದೆ.

Ad Widget ... ..

ಬೆಳ್ತಂಗಡಿ ತಾಲೂಕಿನ ಎರಡು ಪ್ರತ್ಯೇಕ ಕಡೆಗಳಲ್ಲಿ ಸರ್ಕಾರಿ ಜಮೀನನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲಾಗಿದೆ ಎಂಬುದು ದೂರುದಾರರ ಪ್ರಮುಖ ಆರೋಪವಾಗಿದೆ. ಮೊದಲ ಪ್ರಕರಣವು ಕುವೆಟ್ಟು ಗ್ರಾಮದ ಸರ್ವೆ ಸಂಖ್ಯೆ 96/1 ಕ್ಕೆ ಸಂಬಂಧಿಸಿದ್ದು, ಇಲ್ಲಿ ಸುಮಾರು 83 ಸೆಂಟ್ಸ್ ಸರ್ಕಾರಿ ಭೂಮಿಯನ್ನು ಅತಿಕ್ರಮಿಸಿ ರಬ್ಬರ್ ತೋಟ ಮಾಡಲಾಗಿದೆ ಎಂದು ದೂರಲಾಗಿದೆ. ಈ ಪ್ರಕರಣದಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯನ್ನೂ ಎರಡನೇ ಪ್ರತಿವಾದಿಯನ್ನಾಗಿ ಮಾಡಲಾಗಿದೆ.

Ad Widget

ಇನ್ನು ಎರಡನೇ ಪ್ರಕರಣವು ಬೆಳ್ತಂಗಡಿ ಗ್ರಾಮದ ಸರ್ವೆ ಸಂಖ್ಯೆ 173/5 ರಲ್ಲಿನ 25 ಸೆಂಟ್ಸ್ ಭೂಮಿಗೆ ಸಂಬಂಧಿಸಿದೆ. ಇಲ್ಲಿನ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಆಂಫಿಥಿಯೇಟರ್ ನಿರ್ಮಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಈ ಜಾಗಗಳ ಒಟ್ಟು ಮಾರುಕಟ್ಟೆ ಮೌಲ್ಯ ಸುಮಾರು 3.5 ಕೋಟಿ ರೂಪಾಯಿಗಳಿಗೂ ಅಧಿಕ ಎಂದು ಅಂದಾಜಿಸಲಾಗಿದೆ.

ಈಗಾಗಲೇ ಕಂದಾಯ ನಿರೀಕ್ಷಕರು ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದು, ಸರ್ಕಾರಿ ಭೂಮಿಯಲ್ಲಿ ಕಟ್ಟಡ ಮತ್ತು ತೋಟ ಇರುವುದು ದೃಢಪಟ್ಟಿದೆ ಎಂದು ಅರ್ಜಿದಾರರು ಕೋರ್ಟ್ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ, ಅತಿಕ್ರಮಣದ ಸ್ವರೂಪ ಮತ್ತು ಅದರ ವ್ಯಾಪ್ತಿಯ ಬಗ್ಗೆ ಸಮಗ್ರ ಸ್ಥಿತಿ ವರದಿ ಸಲ್ಲಿಸುವಂತೆ ಬೆಳ್ತಂಗಡಿ ತಹಶೀಲ್ದಾರ್‌ಗೆ ನ್ಯಾಯಾಲಯ ಆದೇಶಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಸೇರಿದಂತೆ ಪ್ರಮುಖ ಅಧಿಕಾರಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದ್ದು, ಜುಲೈ 20 ಮತ್ತು ಸೆಪ್ಟೆಂಬರ್ 18 ರಂದು ಮುಂದಿನ ವಿಚಾರಣೆ ನಡೆಯಲಿದೆ. ಪ್ರತಿವಾದಿಗಳು ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

Leave a Comment

Your email address will not be published. Required fields are marked *