ಸಮಗ್ರ ನ್ಯೂಸ್: ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಹಾರಾಟ ನಡೆಸುತ್ತಿದ್ದ ಖಾಸಗಿ ವಿಮಾನವೊಂದು ನಿಯಂತ್ರಣ ತಪ್ಪಿ ಬೆಟ್ಟದ ಪ್ರದೇಶಕ್ಕೆ ಅಪ್ಪಳಿಸಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರು ಮೃತಪಟ್ಟಿರುವ ಭೀತಿ ಎದುರಾಗಿದೆ.
ಜಶ್‌ಪುರ-ನಾರಾಯಣಪುರ ಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರು ನೀಡಿರುವ ಮಾಹಿತಿಯ ಪ್ರಕಾರ, ವಿಮಾನವು ಹಾರಾಟ ನಡೆಸುತ್ತಿದ್ದಾಗ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಕೂಡಲೇ ನಿಯಂತ್ರಣ ಕಳೆದುಕೊಂಡ ವಿಮಾನವು ಸಮೀಪದ ಬೆಟ್ಟಕ್ಕೆ ಅಪ್ಪಳಿಸಿ ಪತನಗೊಂಡಿದೆ. ಅಪಘಾತದ ರಭಸಕ್ಕೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಿಂದ ದಟ್ಟವಾದ ಹೊಗೆ ಮತ್ತು ಬೆಂಕಿಯ ಜ್ವಾಲೆಗಳು ಆಕಾಶಕ್ಕೆ ಚಿಮ್ಮುತ್ತಿರುವ ದೃಶ್ಯಗಳು ಕಂಡುಬಂದಿವೆ.
ದುರದೃಷ್ಟವಶಾತ್, ಈ ವಿಮಾನದಲ್ಲಿ ಎಷ್ಟು ಮಂದಿ ಪ್ರಯಾಣಿಸುತ್ತಿದ್ದರು ಎಂಬ ಬಗ್ಗೆ ಇನ್ನೂ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಜಿಲ್ಲಾಡಳಿತದ ತಂಡಗಳು ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಯನ್ನು ಚುರುಕುಗೊಳಿಸಿವೆ. ದಟ್ಟ ಅರಣ್ಯ ಮತ್ತು ಗುಡ್ಡಗಾಡು ಪ್ರದೇಶವಾದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಅಲ್ಪ ಹಿನ್ನಡೆಯಾಗುತ್ತಿದೆ ಎಂದು ವರದಿಯಾಗಿದೆ. ವಿಮಾನ ಅಪಘಾತಕ್ಕೆ ತಾಂತ್ರಿಕ ದೋಷ ಕಾರಣವೇ ಅಥವಾ ಹವಾಮಾನ ವೈಪರೀತ್ಯವೇ ಎಂಬ ಬಗ್ಗೆ ತನಿಖೆ ಆರಂಭವಾಗಿದೆ.







