ಸಮಗ್ರ ನ್ಯೂಸ್: ಮೇ 3 ರಂದು ನಡೆದಿದ್ದ ನೀಟ್ ಯುಜಿ 2026 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಇದೀಗ ಮರುಪರೀಕ್ಷೆಗೆ ದಿನಾಂಕವನ್ನು ಘೋಷಿಸಲಾಗಿದ್ದು, 2026ರ ಜೂನ್ 21ರಂದು ದೇಶಾದ್ಯಂತ ಮರುಪರೀಕ್ಷೆ ನಡೆಯಲಿದೆ.
ಜೂನ್ 21, 2021 (ಭಾನುವಾರ) ನಡೆಯಲಿದ್ದು ಈಗಾಗಲೇ ಮೇ 3 ರಂದು ನಡೆದಿದ್ದ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಎಲ್ಲಾ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮರುಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ.
ವಿದ್ಯಾರ್ಥಿಗಳು ಮರು ಪರೀಕ್ಷೆಗಾಗಿ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸುವ ಅಥವಾ ನೋಂದಣಿ ಮಾಡುವ ಅಗತ್ಯವಿಲ್ಲ. ಹಳೆಯ ನೋಂದಣಿ ವಿವರಗಳೇ ಚಾಲ್ತಿಯಲ್ಲಿರುತ್ತವೆ.
ಪರೀಕ್ಷೆಗೂ ಕೆಲವು ದಿನಗಳ ಮೊದಲು ಎನ್ಟಿಎ ಅಧಿಕೃತ ವೆಬ್ಸೈಟ್ನಲ್ಲಿ ಹೊಸ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಿದೆ. ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಪಾಡಲು ಮತ್ತು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಎನ್ಟಿಎ ತಿಳಿಸಿದೆ.
ರಾಜಸ್ಥಾನ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ಬಗ್ಗೆ ಕೇಂದ್ರ ತನಿಖಾ ದಳ ತನಿಖೆ ನಡೆಸುತ್ತಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ರದ್ದುಗೊಳಿಸಿ ಮರುಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಎನ್ಟಿಎ ಅಧಿಕೃತ ವೆಬ್ಸೈಟ್ exams.nta.ac.in/NEET ಅನ್ನು ಗಮನಿಸುತ್ತಿರಲು ಸೂಚಿಸಲಾಗಿದೆ.







