ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಪ್ರೀ-ಮಾನ್ಸೂನ್ ವಾತಾವರಣ ತೀವ್ರಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ವಿಶೇಷವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಚಾಮರಾಜನಗರದಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಎಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.
ಕರಾವಳಿ ಭಾಗದಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಮುಂದಿನ ಕೆಲವು ದಿನಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.







