ಸಮಗ್ರ ನ್ಯೂಸ್: ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 29 ರವರೆಗೆ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಇರಲಿದ್ದು, ಜೂನ್ 29 ರಿಂದ ಜುಲೈ 1 ರವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಹಾಗೂ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೂನ್ 29 ರಿಂದ ಜುಲೈ 1 ರವರೆಗೆ ಇಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ‘ಆರೆಂಜ್ ಅಲರ್ಟ್’ ಮುನ್ನೆಚ್ಚರಿಕೆ ನೀಡಲಾಗಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಬಲವಾದ ಗಾಳಿಯೊಂದಿಗೆ ಮಧ್ಯಮ ಗಾತ್ರದ ಮಳೆಯಾಗಲಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಜೂನ್ 29 ರ ನಂತರ ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಹಲವು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಜೂನ್ 29 ರಿಂದ ಜುಲೈ 1 ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಪ್ರಖರತೆ ಹೆಚ್ಚಾಗಲಿದ್ದು, ಸಾರ್ವಜನಿಕರು ಹಾಗೂ ಮೀನುಗಾರರು ಜಾಗರೂಕರಾಗಿರಲು ಸೂಚಿಸಲಾಗಿದೆ.








