ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಖಾಸಗಿ ಶಿಕ್ಷಣ ಸಂಸ್ಥೆಗೆ ಸರ್ಕಾರದ ಅನುದಾನ ಬಳಕೆ| ಕಡಬ ಕಾಂಗ್ರೆಸ್ ನಿಂದ ಗಂಭೀರ ಆರೋಪ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ರಾಜ್ಯ ಸರ್ಕಾರದಿಂದ ಮಂಜೂರಾದ ವಿವಿಧ ಅಭಿವೃದ್ಧಿ ಕಾಮಗಾರಿಗಳ 25 ಕೋಟಿ ರೂಪಾಯಿ ಅನುದಾನದ ಹಂಚಿಕೆಯಲ್ಲಿ ಅಕ್ರಮ ಹಾಗೂ ರಾಜಕೀಯ ಪಕ್ಷಪಾತ ನಡೆದಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

Ad Widget ... .. Ad Widget .

ಕಡಬದಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ, ಸುಳ್ಯ ಶಾಸಕರ ವಿವೇಚನಾ ಅನುದಾನವನ್ನು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಳಸುವ ಬದಲು ಬಿಜೆಪಿ ಬೆಂಬಲಿತ ನಾಯಕರು ಹಾಗೂ ಕೆಲವು ಸಂಘ-ಸಂಸ್ಥೆಗಳ ಶಿಫಾರಸ್ಸಿನ ಮೇರೆಗೆ ಹಂಚಿಕೆ ಮಾಡಲಾಗಿದೆ ಎಂದು ದೂರಿದರು. ಕ್ಷೇತ್ರದಲ್ಲಿ ಅಭಿವೃದ್ಧಿಯ ಅಗತ್ಯವಿರುವ ಅನೇಕ ಪ್ರದೇಶಗಳನ್ನು ನಿರ್ಲಕ್ಷಿಸಿ ರಾಜಕೀಯ ಆಧಾರದ ಮೇಲೆ ಅನುದಾನ ಹಂಚಿಕೆ ಮಾಡಿರುವುದರಿಂದ ಕಡಬ ತಾಲೂಕಿನ ಪ್ರಗತಿಗೆ ಹಿನ್ನಡೆಯಾಗಿದೆ. ಸಾರ್ವಜನಿಕ ಹಣದ ಬಳಕೆಯಲ್ಲಿ ಪಾರದರ್ಶಕತೆ ಇಲ್ಲದಿರುವುದು ಎದ್ದು ಕಾಣುತ್ತಿದೆ ಎಂದು ಅವರು ಹೇಳಿದರು.

Ad Widget

ಕೋಡಿಂಬಾಳ ಗ್ರಾಮದ ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾಲಯ ಕಟ್ಟಡ ನಿರ್ಮಾಣಕ್ಕೆ 50 ಲಕ್ಷ ರೂಪಾಯಿ ಅನುದಾನ ಮಂಜೂರು ಮಾಡಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಖಾಸಗಿ ಶಿಕ್ಷಣ ಸಂಸ್ಥೆಗೆ ಸರ್ಕಾರಿ ಅನುದಾನ ನೀಡಿರುವುದು ಕಾನೂನುಬದ್ಧವೇ ಎಂಬ ಪ್ರಶ್ನೆಯನ್ನು ಎತ್ತಿರುವ ಮುಖಂಡರು, ಈ ಅನುದಾನ ಮಂಜೂರಿನ ಹಿಂದೆ ನಿಯಮ ಉಲ್ಲಂಘನೆಯಾಗಿದೆಯೇ ಎಂಬುದನ್ನು ಪರಿಶೀಲಿಸಲು ಮುಖ್ಯಮಂತ್ರಿಗಳಿಗೆ ದೂರು ನೀಡಲಾಗುವುದು ಮತ್ತು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಲಾಗುವುದು ಎಂದಿದ್ದಾರೆ.

ಕಡಬ ತಾಲೂಕಿನಲ್ಲಿ ಸುಮಾರು 118 ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿದ್ದು, 8 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇವರಲ್ಲಿ ಹೆಚ್ಚಿನವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಾಗಿದ್ದಾರೆ. ಅನೇಕ ಸರ್ಕಾರಿ ಶಾಲೆಗಳು ಕಟ್ಟಡ, ಶೌಚಾಲಯ, ಕುಡಿಯುವ ನೀರಿನಂತಹ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿರುವಾಗ, ಇವುಗಳನ್ನು ಕಡೆಗಣಿಸಿ ಖಾಸಗಿ ಸಂಸ್ಥೆಗೆ ದೊಡ್ಡ ಮೊತ್ತದ ಅನುದಾನ ನೀಡಿರುವುದು ಬಡ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾಡಿದ ಅನ್ಯಾಯ ಎಂದು ಕಾಂಗ್ರೆಸ್ ಆರೋಪಿಸಿದೆ.

ಲಭ್ಯವಿರುವ ದಾಖಲೆಗಳ ಪ್ರಕಾರ, ಶಾಸಕರ ವಿವೇಚನಾ ಅನುದಾನದ ಅಡಿಯಲ್ಲಿ ದೇವಸ್ಥಾನಗಳ ಅಭಿವೃದ್ಧಿ, ರಸ್ತೆ ಕಾಮಗಾರಿಗಳು, ತಡೆಗೋಡೆ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳಿಗೆ ಲಕ್ಷಾಂತರ ರೂಪಾಯಿ ಹಂಚಿಕೆ ಮಾಡಲಾಗಿದೆ. ಆದರೆ ಖಾಸಗಿ ವಿದ್ಯಾಲಯಕ್ಕೆ 50 ಲಕ್ಷ ರೂಪಾಯಿ ನೀಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಾರ್ವಜನಿಕರ ತೆರಿಗೆ ಹಣವನ್ನು ನ್ಯಾಯಸಮ್ಮತವಾಗಿ ಬಳಸಬೇಕಾದ ಜವಾಬ್ದಾರಿ ಜನಪ್ರತಿನಿಧಿಗಳ ಮೇಲಿದ್ದು, ಈ ಸಂಪೂರ್ಣ ಹಂಚಿಕೆ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಉನ್ನತ ಮಟ್ಟದಲ್ಲಿ ತನಿಖೆ ನಡೆಸಬೇಕು ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಆಗ್ರಹಿಸಿದೆ. ಮಾಧ್ಯಮಗೊಷ್ಟಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *